ಮೈಸೂರಿಗೆ ರಾಷ್ಟ್ರಪತಿ ಆಗಮನ

president of india
Published on

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆ. 5ರಂದು ನಗರಕ್ಕೆ ಆಗಮಿಸಲಿದ್ದಾರೆ.


ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 2.45ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇನ್ನಿತರರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಿದ್ದಾರೆ.


ಬಳಿಕ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮಸಣಗುಡಿಗೆ ರಾಷ್ಟ್ರಪತಿ ತೆರಳಲಿದ್ದಾರೆ. ಅಲ್ಲಿನ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ, ಆಸ್ಕರ್ ಪ್ರಶಸ್ತಿ ವಿಜೇತ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡಿರುವ ಕಾವಾಡಿ ದಂಪತಿ ಬೊಮ್ಮ ಮತ್ತು ಬೆಳ್ಳಿ ಅವರನ್ನು ಭೇಟಿಯಾಗಲಿದ್ದಾರೆ. ಆನೆಗಳ ಮಾವುತರು, ಕಾವಾಡಿಗಳೊಂದಿಗೆ ಸಂವಾದ ನಡೆಯಲಿದ್ದಾರೆ.


ಮತ್ತೆ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಸಂಜೆ 5.45ಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸಲಿದ್ದಾರೆ.
ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಶುಕ್ರವಾರ ಸಭೆ ನಡೆಸಿ, ಅಗತ್ಯ ಸಿದ್ಧತೆ, ಶಿಷ್ಟಾಚಾರ ಪಾಲನೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net