

ಮೈಸೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜತೆಗೆ ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಇರುವ ಸರ್ಕಾರದ ಸೌಲಭ್ಯ ದೊರಕಿಸಿಕೊಡಲು ಎಲ್ಲ ಇಲಾಖೆಗಳು ಕಾರ್ಯಕ್ರಮ ರೂಪಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಂಸದೀಯ ಸಮಿತಿ ಅಧ್ಯಕ್ಷೆ ರಮಾದೇವಿ ಅಧಿಕಾರಿಗಳಿಗೆ ಸೂಚಿಸಿದರು.
ಎಸ್‌ಸಿ-ಎಸ್‌ಟಿ ಹಾಗೂ ಸಪಾಯಿ ಕರ್ಮಚಾರಿ ಸೇರಿದಂತೆ ಇನ್ನಿತರ ಹಿಂದುಳಿದ ವರ್ಗಗಳ ಕಲ್ಯಾಣ ಯೋಜನೆ ಜಾರಿ ಕುರಿತು ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಸರ್ಕಾರ ಹಿಂದುಳಿದವರು, ಎಸ್‌ಸಿ-ಎಸ್‌ಟಿ, ಸಫಾಯಿ ಕರ್ಮಚಾರಿ ಸೇರಿದಂತೆ ತೀರಾ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ತಾವು ಹಮ್ಮಿಕೊಂಡಿರುವ ಪ್ರಗತಿ ಕಾರ್ಯಕ್ರಮಗಳ ಕುರಿತು ಸಮಿತಿಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಎಸ್‌ಸಿ-ಎಸ್‌ಟಿ, ಒಬಿಸಿ ಮತ್ತು ಅಪಾಯಕಾರಿ ಉದ್ಯೋಗದಲ್ಲಿ ತೊಡಗಿರುವ ವ್ಯಕ್ತಿಗಳ ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು, ಸಫಾಯಿ ಕರ್ಮಚಾರಿಗಳು, ಲೈಂಗಿಕ ಅಲ್ಪಸಂಖ್ಯಾತರು, ಮಾದಕ ವ್ಯಸನಿಗಳಿಗೆ ಮತ್ತು ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪುನರ್ವಸತಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಮತ್ತು ರಕ್ಷಣಾ ಸಚಿವಾಲಯದ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಎಸ್ಸಿ-ಎಸ್ಟಿ ಮತ್ತು ಅಂಗವಿಕಲರ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳು, ಸಿಎಸ್‌ಆರ್ ನಿಧಿ ಬಳಸಿಕೊಂಡು ರೂಪಿಸಿರುವ ಚಟುವಟಿಕೆ ಹಾಗೂ ಕಾರ್ಯಕ್ರಮಗಳ ಬಗ್ಗೆ ವಿವರ ಪಡೆದರು.
ರಾಜ್ಯ ಹಾಗೂ ಜಿಲ್ಲೆಯಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿಗಳು, ಪ್ರತಿನಿಧಿಗಳೊಂದಿಗೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ವಿವಿಧ ವಿದ್ಯಾರ್ಥಿವೇತನ ಯೋಜನೆಗಳು, ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ರೂಪಿಸಿರುವ ದೀನ್ ದಯಾಳ್ ದಿವ್ಯಾಂಗಜನ ಪುನರ್ವಸತಿ ಯೋಜನೆ ಸೇರಿದಂತೆ ರಾಜ್ಯ ಯೋಜನೆಗಳ ಮಾಹಿತಿ ಪಡೆದುಕೊಂಡರು. ಎಸ್‌ಸಿ, ಎಸ್ಟಿ ಮತ್ತು ಅಂಗವಿಕಲರಿಗೆ ಆದ್ಯತೆಯ ವಲಯದ ಆಧಾರದ ಮೇಲೆ ಸಾಲ ನೀಡುವ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹಣಕಾಸು ಸಚಿವಾಲಯದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
ಸಂಸದೀಯ ಸಮಿತಿಯ ಸದಸ್ಯರಾದ ಸಂಗೀತ ಆಜಾದ್, ಭೋಲನಾಥ್, ಪ್ರಮೀಳಾ ಬಿಸೋಯಿ, ಛತರ್ ಸಿಂಗ್ ದರ್ಬಾರ್, ರಂಜೀತ ಕೋಲಿ, ಅಕ್ಷಯ್ಬರ್ ಲಾಲ್, ಸುಮಿತ್ರಾ ಬಾಲ್ಮಿಕ್, ರಮಿಲಾಬೆನ್ ಬೆಚಾರ್ಭಾಯ್ ಬರಾ, ಚಂದ್ರಶೇಖರನ್, ಮಮತಾ ಮೊಹಂತ, ನಾರಾಯಣ್ ಕೊರಗಪ್ಪ, ರಾಮ್ಜೀ, ಅನಿತಾಭಟ್ ಪಂದ, ಕೃಷ್ಣೇಂದ್ರಕುಮಾರ್, ಜ್ಯೋತಿ ಕಪೂರ್, ಮಾರ್ಷಲ್ ಟುಟೊ, ಹಯೋಕಿಪ್ ಕಾಕೈ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಮಂಜುಳಾ, ಅಂಗವಿಕಲ ಕಲ್ಯಾಣ ಇಲಾಖೆಯ ಆಯುಕ್ತೆ ಲತಾ ಕುಮಾರಿ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ನಗರಪಾಲಿಕೆಯ ಆಯುಕ್ತರಾದ ಲಕ್ಷ್ಮೀಕಾಂತ ರೆಡ್ಡಿ ಇನ್ನಿತರ ಇಲಾಖೆ ಅಧಿಕಾರಿಗಳು ಇದ್ದರು.