

ಮೈಸೂರು: ಮೈಸೂರು ನಗರ ವ್ಯಾಪ್ತಿಯಲ್ಲಿರುವ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳ ಸರಹದ್ದು ಮರುರಚನೆ ಮಾಡಬೇಕು ಎಂದು ಕೋರಿ ಶಾಸಕ ತನ್ವೀರ್ ಸೇಠ್ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಮೈಸೂರು ನಗರ ಪ್ರಸ್ತುತ ವೇಗವಾಗಿ ಬೆಳೆಯುತ್ತಿದ್ದು, ಇದರ ವ್ಯಾಪ್ತಿ ವಿಸ್ತಾರಗೊಳ್ಳುತ್ತಿದೆ. ಅನೇಕ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು, ಕಾರ್ಖಾನೆಗಳು, ಪ್ರವಾಸಿ ತಾಣಗಳಿದ್ದು, ನಿತ್ಯ ಉದ್ಯಮಿಗಳು, ವಿದ್ಯಾರ್ಥಿಗಳು, ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ಪ್ರಸ್ತುತ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಇರುವ ಪೊಲೀಸ್ ಸೌಕರ್ಯಗಳು ನಗರ ಬೆಳೆಯುತ್ತಿರುವ ವೇಗಕ್ಕೆ ಹಾಗೂ ಜನಸಂಖ್ಯೆಗೆ ಅನುಗುಣವಾಗಿಲ್ಲ. ಮೈಸೂರು ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ (ನರಸಿಂಹರಾಜ, ಚಾಮರಾಜ, ಕೃಷ್ಣರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ನಗರ ವ್ಯಾಪ್ತಿಗೆ ಸೇರುವ) ಮೈಸೂರು ನಗರದ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಹಾಗೂ ಗಸ್ತು ವಾಹನಗಳ ಸಂಖ್ಯೆ ಹೆಚ್ಚಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ನೂತನ ಪೊಲೀಸ್ ಠಾಣೆ(ಸಾಮಾನ್ಯ, ಮಹಿಳಾ, ಸಂಚಾರ)ಗಳನ್ನು ಸ್ಥಾಪಿಸಬೇಕು. ಸಾರ್ವಜನಿಕರ ಸುರಕ್ಷತೆಗೆ ಅನುಕೂಲವಾಗುವಂತೆ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು. ಹೆಚ್ಚುವರಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಬೇಕು. ಸಂಚಾರ ನಿಯಮ ಉಲ್ಲಂಘನೆಯಡಿ ಸಂಗ್ರಹವಾದ ದಂಡದ ಶೇ.50ರಷ್ಟು ಹಣವನ್ನು ಬೆಂಗಳೂರು ಮಾದರಿಯಲ್ಲಿ ಸಂಚಾರ ವ್ಯವಸ್ಥೆ ಅಭಿವೃದ್ಧಿಗೆ ಉಪಯೋಗಿಸಬೇಕು ಎಂದು ವಿನಂತಿಸಿದ್ದಾರೆ.