

ಮೈಸೂರು: ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣವನ್ನು ಖಂಡಿಸಿ ಅಖಿಲ ಕರ್ನಾಟಕ ಸಿದ್ದರಾಮಯ್ಯನವರ ಅಭಿಮಾನಿಗಳ ಬ್ರಿಗೇಡ್ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಕೋರ್ಟ್ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಜತೆಗೆ, ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಇದು ಖಂಡನೀಯ. ಮಾಜಿ ಮುಖ್ಯಮಂತ್ರಿ ಅವರೊಂದಿಗೆ ಈ ರೀತಿ ನಡೆದುಕೊಂಡಿದ್ದಾರೆ. ಇನ್ನು ಜನಸಾಮಾನ್ಯರು ಅಲ್ಲಿ ಹೇಗೆ ಬದುಕುವುದು. ಭದ್ರತೆ ಕಲ್ಪಿಸುವುದರಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಇದು ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ಈ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು. ಮುಂದಿನ ದಿನಗಳಲ್ಲಿ ಈ ರೀತಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಬ್ರಿಗೇಡ್‌ನ ಮುಖಂಡರಾದ ಮಾಕನಹುಂಡಿ ಶಿವು, ಮೈಸೂರು ಬಸವಣ್ಣ, ಹಿನಕಲ್ ಉದಯ ಇನ್ನಿತರರಿದ್ದರು.