ಮೊದಲ ದಿನ 1,19,487 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ, ಶೇ.95.57 ರಷ್ಟು ಸಾಧನೆ

31CBP2
Published on

ಚಿಕ್ಕಬಳ್ಳಾಪುರ : ಜಿಲ್ಲಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂರು ದಿನಗಳ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಮೊದಲ ದಿನ ಜಿಲ್ಲೆಯಲ್ಲಿನ 1,25,024 ಮಕ್ಕಳ ಪೈಕಿ 1,19,487 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.95.57 ರಷ್ಟು ಸಾಧನೆ ತೋರಲಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಮಗುವಿಗೆ ಲಸಿಕೆ ಹಾಕಿ ಮಾತನಾಡಿದ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಮಗುವಿನ ಭವಿಷ್ಯದ ಹಿತದೃಷ್ಟಿಯಿಂದ ಕಾಲ ಕಾಲಕ್ಕೆ ಲಸಿಕೆ ಹಾಕಿಸುವುದು ಪಾಲಕರ ಮುಖ್ಯ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷೃ ತೋರಬಾರದು ಎಂದರು.

ಜಿಲ್ಲೆಯ ಲಸಿಕೆ ಹಾಕುವ ಕಾರ್ಯದಲ್ಲಿ ಲೋಪಗಳಿಗೆ ಅವಕಾಶ ನೀಡಬಾರದು. ಆರೋಗ್ಯ ಇಲಾಖೆ ಸಿಬ್ಬಂದಿ ಯಾವುದೇ ಮಗು ವಂಚಿತವಾಗದಂತೆ ನೋಡಿಕೊಳ್ಳುವ ಮೂಲಕ ಅಭಿಯಾನದಲ್ಲಿ ಶೇ.100ರಷ್ಟು ಗುರಿ ಸಾಧಿಸಬೇಕು, ಈ ನಿಟ್ಟಿನಲ್ಲಿ ಜನರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪ್ರಸಕ್ತ ಸಾಲಿನಲ್ಲಿ 5 ವರ್ಷದೊಳಗಿನ 1,25,024 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು 649 ಬೂತ್‌ಗಳನ್ನು ಗುರುತಿಸಲಾಗಿದೆ. 2,568 ಸಿಬ್ಬಂದಿಯನ್ನು ಮತ್ತು 132 ಸೂಪರ್ ವೈಜರ್‌ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್.ಕಬಾಡೆ, ಲಸಿಕೆ ಬಗ್ಗೆ ಕಿಡಿಗೇಡಿಗಳು ಹಬ್ಬಿಸುವ ವದಂತಿಗಳಿಗೆ ಪಾಲಕರು ಕಿವಿಗೊಡಬಾರದು. ಲಸಿಕೆ ಹಾಕಿಸುವುದರಿಂದ ಮಗುವಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಜಿಪಂ ಸದಸ್ಯ ಮುನಿಯಪ್ಪ, ನಗರಸಭೆ ಸದಸ್ಯ ಯತೀಶ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ ಚನ್ನಕೇಶವರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ರಮೇಶ್ ಮತ್ತಿತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net