ಯಾವುದೇ ಲೋಪವಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಿ

28 HANUR 2
Published on

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಶಿಷ್ಟಾಚಾರವನ್ನು ಪಾಲಿಸುವುದರ ಮೂಲಕ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ರೂಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಸಚಿವ ಸಂಪುಟ ಸಭೆ ಆಯೋಜನೆ ಸಂಬಂಧ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ನಂಜುಂಡಪ್ಪ ವರದಿಯ ಪ್ರಕಾರ ಚಾ.ನಗರ ಹಿಂದುಳಿದ ಜಿಲ್ಲೆಯಾಗಿದೆ. ಆದರೆ ಜಿಲ್ಲೆಯ ಅಭಿವೃದ್ಧಿಗೆ ಈವರೆಗೂ ಸರ್ಕಾರದಿಂದ ವಿಶೇಷ ಅನುದಾನ ದೊರೆತಿಲ್ಲ. ಹಾಗಾಗಿ ಇದೇ ಮೊದಲ ಬಾರಿಗೆ ಮ.ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ ನಡೆಯುತ್ತಿರುವುದರಿಂದ ಹನೂರು ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆದ್ದರಿಂದ ಸಭೆಯ ಯಶಸ್ಸಿಗೆ ಪ್ರತಿಯೊಬ್ಬರೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ಸಭೆಯನ್ನು ದೀಪದಗಿರಿ ಒಡ್ಡುವಿನ ಶ್ರೀ ಮಹದೇಶ್ವರ ಪ್ರತಿಮೆಯ ಆವರಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆದ್ದರಿಂದ ಸಭಾಂಗಣ, ಆಸನ ವ್ಯವಸ್ಥೆ, ಊಟ ಹಾಗೂ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳುವುದರ ಮೂಲಕ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ವಹಿಸಬೇಕು. ಇನ್ನು ಸಭೆಗೆ ಸಿಎಂ, ಡಿಸಿಎಂ, ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಆದ್ದರಿಂದ ಕಡ್ಡಾಯವಾಗಿ ಶಿಷ್ಟಾಚಾರವನ್ನು ಪಾಲಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಮಾತನಾಡಿ, ಮ.ಬೆಟ್ಟದಲ್ಲಿ ಮೊದಲ ಬಾರಿಗೆ ಕ್ಯಾಬಿನೆಟ್ ಸಭೆ ನಡೆಯಲಿರುವುದರಿಂದ ಜಿಲ್ಲೆಯ ಅಭಿವೃದ್ಧಿ ಸಂಬಂಧ ಪ್ರಮುಖ ಯೋಜನೆಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ. ಹಾಗಾಗಿ ಸಭೆಯು ಯಶಸ್ವಿಯಾಗಬೇಕು. ಈ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿ ಜವಾಬ್ದಾರಿಯನ್ನು ನೀಡಲಾಗುವುದು. ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗಿಯಾಗಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಅಗತ್ಯ ಸಲಹೆ, ಸೂಚನೆಯನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net