

ಮೂಡಿಗೆರೆ: ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅತಿಹೆಚ್ಚು ಮಳೆಯಿಂದ ಮನೆ ಕುಸಿತ, ಬೆಳೆ ಹಾನಿಯಂತಹ ಅನಾಹುತಗಳು ಸಂಭವಿಸಿವೆ. ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ ನಡೆದಿದೆ ಎಂದು ಸಚಿವ ಬೈರತಿ ಬಸವರಾಜು ಹೇಳಿದರು.
ತಾಲೂಕಿನ ಹೊಯ್ಸಳಲು, ಜನ್ನಾಪುರ, ಬಣಕಲ್, ಕೊಟ್ಟಿಗೆಹಾರ ಭಾಗದಲ್ಲಿನ ಹಾನಿ ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿರಾಶ್ರಿತರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ ಸೋಮವಾರದಿಂದ ಪರಿಹಾರದ ಚೆಕ್ ವಿತರಿಸಲಾಗುವುದು ಎಂದು ತಿಳಿಸಿದರು.
2 ದಿನ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಪರಿಸ್ಥಿತಿ ಅವಲೋಕನ ನಡೆಸಲಾಗುವುದು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ಹಲವು ಗ್ರಾಮಗಳು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಗ್ರಾಮಗಳಿಗೆ ಕೂಡಲೇ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.