

ಬಾಗಲಕೋಟೆ: ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಪ್ರಮುಖವಾದದ್ದು. ಯುವಜನೋತ್ಸವ ಕಾರ್ಯಕ್ರಮಗಳ ಮೂಲಕ ಯುವಕರಲ್ಲಿ ಸೃಜನಾತ್ಮಕತೆ ಮತ್ತು ಕೌಶಲಗಳನ್ನು ಬೆಳೆಸುವ ಕೆಲಸ ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.
ನಗರದ ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ೧೭ನೆಯ ಶಕ್ತಿ ಸಂಭ್ರಮ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಶಕ್ತಿಯೇ ಅಭಿವೃದ್ಧಿಯ ಹರಿಕಾರರಾಗಿದ್ದು, ಅವರಲ್ಲಿರುವ ಕೌಶಲ ಮತ್ತು ಪ್ರತಿಭೆಗಳನ್ನು ಬೆಳೆಸುವ ಕೆಲಸವಾಗಬೇಕಿದೆ ಎಂದರು.
ಶಿಕ್ಷಣ ಎಂದರೆ ಕೇವಲ ಉಪನ್ಯಾಸ ನೀಡುವುವುದು ಅಲ್ಲ. ವಿದ್ಯಾರ್ಥಿಗಳಲ್ಲಿ ಸಾಮರ್ಥ್ಯವನ್ನು ಅರ್ಥೈಸುವ ಪ್ರಯತ್ನ ಮಾಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ಸರ್ವಾಂಗಿನ ಅಭಿವೃದ್ಧಿಗೆ ಅವಶ್ಯಕವಾಗಿದ್ದು, ಅದನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕಿದೆ. ವಿದ್ಯಾರ್ಥಿಗಳಲ್ಲಿರುವ ಕೀಳಿರಿಮೆಯನ್ನು ತೊಡೆದು ಹಾಕಿ ಅವರಲ್ಲಿ ನಾಯಕತ್ವಗುಣವನ್ನು ಬೆಳೆಸುವಲ್ಲಿ ಪ್ರಮುಖ ಆದ್ಯತೆ ನೀಡಬೇಕು ಎಂದು ಹೇಳಿದರು.
ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಶ್ರೀನಿವಾಸ ಬಳ್ಳಿ ಮಾತನಾಡಿ, ಯುವ ಎನ್ನುವ ಪದವೇ ಶಕ್ತಿ ಸಂಕೇತವಾಗಿದೆ. ಭಾರತದಲ್ಲಿ ಅನಾದಿಕಾಲದಿಂದಲೂ ಮಹಿಳೆಯರನ್ನು ಶಕ್ತಿಯ ಪ್ರತಿರೂಪವಾಗಿ ಗೌರವಿಸಲಾಗುತ್ತಿದ್ದು ಯುವತಿಯರ ಸರ್ವಾಂಗೀಣ ಅಭಿವೃದ್ಧಿಗೆ ಮಹಿಳಾ ವಿವಿ ಕಾರ್ಯನಿರ್ವಹಿಸುತ್ತಿರುವುದು ವಿಶೇಷ. ಒಂದು ದೇಶದ ಬಗ್ಗೆ ತಿಳಿದುಕೊಳ್ಳಬೇಕಾದರೆ ಅಲ್ಲಿರುವ ಯುವಜನತೆಯನ್ನು ಅಧಯನಮಾಡಬೇಕು ಯುವಕರ ನಡತೆ ದೇಶದ ಭವಿಷ್ಯವನ್ನು ನಿರ್ದರಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಿದ್ದರು. ಬಿವಿವಿ ಸಂಘದ ಕಾಲೇಜು ಆಡಳಿತ ಮಂಡಳಿಯ ಕಾರ್ಯಧ್ಯಕ್ಷ ಗುರುಬಸವ ಸೂಳಿಭಾವಿ, ಪ್ರಾಚಾರ್ಯ ಎಸ್.ಜೆ.ಒಡೆಯರ, ಪ್ರೊ.ವಿ.ಬಿ. ಕೋರಿಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಎಸ್.ಎಂ.ಸಂಗಮ ಹಾಗೂ ಪಿ.ಎಸ್.ಪಾತ್ರೊಟ ನಿರೂಪಿಸಿದರು, ಸಂಜನಾ ಹಾಗೂ ತಂಡದವರು ಪ್ರಾರ್ಥಿಸಿದರು, ಎಸ್.ಎಂ.ಮುರಗೋಡ ವಂದಿಸಿದರು.
ಕೋಟ್..
ಶೈಕ್ಷಣಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ಹೆಣ್ಣು ಮಕ್ಕಳು ಯಾವ ಪುರುಷರಿಗೆ ಕಡಿಮೆ ಇಲ್ಲ. ವಿವಿಗಳು ಯುವ ಜನೋತ್ಸವದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಯುವ ಶಕ್ತಿಯಲ್ಲಿರುವ ಕೌಶಲವನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಎಲ್ಲ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು.