ಯುವ ಮತದಾರರ ನೋಂದಣಿಗೆ ಕ್ರಮವಹಿಸಲು ಸಿಇಒ ಸೂಚನೆ

ಯುವ ಮತದಾರರ ನೋಂದಣಿಗೆ ಕ್ರಮವಹಿಸಲು ಸಿಇಒ ಸೂಚನೆ
Published on

ಹಾಸನ: ಜಿಲ್ಲೆಯಲ್ಲಿ ಇದುವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗದೆ ಬಾಕಿ ಉಳಿದಿರುವ ಯುವ ಮತದಾರರ ನೋಂದಣಿಗೆ ಕ್ರಮವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸ್ವೀಪ್ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು, ಇಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹಾಗೂ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿಯಲ್ಲಿರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಹೆಸರು ಕೈಬಿಟ್ಟು ಹೋಗದಂತೆ ನೋಂದಣಿ ಮಾಡಿಸಲು ತಿಳಿಸಿದರು.
ಜಿಲ್ಲೆಯಲ್ಲಿರುವ ಕೈಗಾರಿಕಾ ಸ್ಥಳಗಳಲ್ಲಿ ಕೆಲಸ ಮಾಡುವ ಯುವಜನತೆಯ ನೋಂದಣಿಗಾಗಿ ಸ್ಥಳದಲ್ಲಿಯೇ ಕ್ಯಾಂಪೇನ್ ಮಾಡಿ ನೋಂದಣಿ ಮಾಡಿಸಲು ತಿಳಿಸಿದರಲ್ಲದೆ, ಅದೇರೀತಿ ವಿಕಲಚೇತನರು, ತೃತೀಯ ಲಿಂಗಿಗಳು ಯಾರು ಮತದಾನದಿಂದ ಹೊರಗುಳಿದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಜವಾಬ್ದಾರಿವಹಿಸಿ ನೋಂದಣಿ ಮಾಡಿಸುವಂತೆ ತಿಳಿಸಿದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನೋಂದಣಿ ಮಾಡಿಸುವುದು ಹಾಗೂ ಸ್ವೀಪ್ ಚಟುವಟಿಕೆಗಳ ಮೂಲಕ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ಸಮಿತಿಯ ಮುಖ್ಯ ಉದ್ದೇಶವಾಗಿದೆ. ಅತಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ಅಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಕಸ ತೆಗೆದುಕೊಂಡು ಹೋಗುವ ಆಟೋಗಳ ಮೂಲಕ ಜಾಗೃತಿ ಮಾಹಿತಿಯನ್ನು ಬಿತ್ತರಿಸಲು ತಿಳಿಸಿದರು.
ಜ.25 ರಂದು ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ. ಅದೇರೀತಿ ತಾಲ್ಲೂಕು ಮಟ್ಟದಲ್ಲಿಯೂ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವಂತೆ ತಿಳಿಸಿದರು. ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಪುಸ್ತಕ ರೂಪಕದಲ್ಲಿ ಬಹುಮಾನ ವಿತರಿಸಲು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net