

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆ.28ರಂದು ನಡೆಯುವ ಯೋಗಥಾನ್-2022 ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿಗೆ ಹೊಸ ಆಪ್ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಯೋಗಥಾನ್-2022 ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ವಿವಿಧ ಇಲಾಖೆಗಳು ಜವಾಬ್ದಾರಿ ವಹಿಸಿಕೊಂಡು ಪಾಲ್ಗೊಳ್ಳಬೇಕು. ಇದಕ್ಕಾಗಿ ಹಿರಿಯ ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಬೇಕು ಎಂದರು.
ಅಂದಾಜು ವೆಚ್ಚ ಪಟ್ಟಿ ತಯಾರಿಸಬೇಕು. ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಬೇಕು. ಶಾಲೆಗಳಲ್ಲಿ ನಿರಂತರವಾಗಿ ಯೋಗ ತರಬೇತಿ ನಡೆಯುವಂತೆ ನೋಡಿಕೊಳ್ಳಬೇಕು. ಎನ್ಎಸ್ಎಸ್, ಎನ್ಸಿಸಿ, ಯೋಗ ಸಂಸ್ಥೆಗಳು, ವಿವಿಧ ಸಂಘ, ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುವಾಗುವಂತೆ ಬಸ್ ಹಾಗೂ ಇತರೆ ವಾಹನ ವ್ಯವಸ್ಥೆ ಮಾಡಲು ಯೋಜಿಸಲಾಗಿದೆ. ಯೋಗಥಾನ್ನಲ್ಲಿ ವಿವಿಧ ಪ್ರೌಢಶಾಲಾ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಉಪರ್ದೇಶಕಿ ಡಾ. ಮಂಜುಳಾ ಹುಲ್ಲಳ್ಳಿ ಮಾತನಾಡಿ, ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗಥಾನ್ ನಡೆಯಲಿದ್ದು 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಪ್ರೌಢಶಾಲೆಯ 3 ಸಾವಿರ, ಪಿಯು ಕಾಲೇಜುಗಳ 2 ಸಾವಿರ, ಪದವಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಸೇರಿಸಿ 5 ಸಾವಿರ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಉಳಿದಂತೆ ವಿವಿಧ ಸಂಘ, ಸಂಸ್ಥೆಗಳು, ಯೋಗ ಸಂಸ್ಥೆಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.