ಯೋಗ ದಿನಾಚರಣೆಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಲು ಸೂಚನೆ

IMG-20230612-WA0025
Published on

ಮೈಸೂರು:ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅರಮನೆ ಆವರಣದಲ್ಲಿ ಜೂ.21ರಂದು ಆಯೋಜಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಎಲ್ಲ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ನೂತನ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 500 ಜನರಿಂದ ಸಾಂಕೇತಿಕ ಯೋಗ ಪ್ರದರ್ಶನ ಹಾಗೂ ನಗರದ ಅರಮನೆಯ ಮೈದಾನದಲ್ಲಿ 12 ಸಾವಿರ ಜನರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜೂ.21 ರಂದು ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಯೋಗ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಮ್ಯಾಟ್‌ಗಳನ್ನು ಯೋಗಪಟುಗಳೇ ತರಬೇಕಾಗಿದೆ. ಯೋಗ ದಿನಾಚರಣೆಯಲ್ಲಿ ಭಾಗವಹಿಸುವವರು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಬೇಕು ಎಂದು ಹೇಳಿದರು.
ಜೂ.18 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಅಭ್ಯಾಸ ನಡೆಯಲಿದ್ದು ಆಸಕ್ತರು ಆ ದಿನವೂ ಭಾಗವಹಿಸಬಹುದು. ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಮೊಬೈಲ್ ಶೌಚ, ಅಗ್ನಿಶಾಮಕದಳ, ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯೋಗ ಸಂಸ್ಥೆಗಳು, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಎನ್‌ಎಸ್‌ಎಸ್ ಘಟಕ, ಪದವಿಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಗ ತರಬೇತುದಾರರು ಇವರೆಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಆಯುಷ್ ಇಲಾಖೆಯ ಡಾ.ಪುಷ್ಪಾ, ಮೈಸೂರು ಯೋಗ ಒಕ್ಕೂಟದ ಶ್ರೀಹರಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ಇದೇ ವೇಳೆ ಯೋಗಭ್ಯಾಸದ ಅಭ್ಯಾಸ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net