

ರಾಯಚೂರು: ಸಂಪೂರ್ಣವಾಗಿ ಹದಗೆಟ್ಟಿರುವ ಗದ್ವಾಲ್ ರಸ್ತೆಯನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಮಡ್ಡಿಪೇಟೆ ಬಡಾವಣೆ ನಿವಾಸಿಗಳು ರಾಯಚೂರು-ಗದ್ವಾಲ್ ರಸ್ತೆಯಲ್ಲಿ ಶುಕ್ರವಾರ ಸಂಚಾರ ತಡೆ ನಡೆಸಿದರು.
ಕಳೆದ ವರ್ಷ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು, ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ನಿವಾಸಿಗಳು ಸಂಕಷ್ಟ ಎದುರಿಸುವಂತಾಗಿದೆ. ಇತ್ತೀಚೆಗೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಹಾಳಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ರಸ್ತೆಯಲ್ಲಿ ಹೆಚ್ಚಿನ ವಾಹನಗಳ ಸಂಚಾರವಿದ್ದು, ರಸ್ತೆ ಪಕ್ಕದ ಮನೆಗಳಿಗೆ ಹೆಚ್ಚಿನ ಧೂಳು ನುಗ್ಗಿ ಅನಾರೋಗ್ಯಕ್ಕೆ ಕಾರಣವಾಗಿದೆ. ವಾಡ್ 22 ಮತ್ತು 23ರ ಜನರು ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು ಓಡಾಡಲು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರಿಗೆ ಮಾಹಿತಿ ನೀಡದೆ ಏಕಾಏಕಿ ಸಂಚಾರ ತಡೆ ನಡೆಸಿದ್ದರಿಂದ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕಾಮಗಾರಿ ಆರಂಭಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ನಿವಾಸಿಗಳಾದ ಯು.ನರಸರೆಡ್ಡಿ, ಕೆ.ಜಿ.ವೀರೇಶ, ಶಂಕರನಾಯಕ, ವಿ.ಎಸ್.ಯಲ್ಲಪ್ಪ, ಕೆ.ನರಸಿಂಹಲು, ವಿರೇಶ, ಗೋವಿಂದ ನಾಯಕ, ರಮೇಶ, ವೆಂಕಟೇಶ ವೇಲೂರು ಹಾಗೂ ಬಡಾವಣೆ ಮಹಿಳೆಯರು ಪಾಲ್ಗೊಂಡಿದ್ದರು.