

ಚಾಮರಾಜನಗರ: ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಅಗತ್ಯವಾಗಿ ಪಾಲನೆ ಮಾಡಬೇಕು. ಈ ಮೂಲಕ ಅಪಘಾತಗಳನ್ನು ನಿಯಂತ್ರಣ ಮಾಡಬೇಕಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯಿತ್ರಿ ಸಲಹೆ ನೀಡಿದರು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಸಾರಿಗೆ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2025 ಅಂಗವಾಗಿ ಶನಿವಾರ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರತಿ ವರ್ಷವೂ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 2023-24 ನೇ ಸಾಲಿನಲ್ಲಿ 254 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 250 ಕ್ಕಿಂತಲೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ವತಿಯಿಂದ ಜನವರಿ ಮಾಸದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಈ ಮೂಲಕ ಜನರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಆರ್‌ಟಿಓ ಇನ್ಸ್‌ಪೆಕ್ಟರ್ ಡಿ.ಕೆ.ದಿನೇಶ್ ಕುಮಾರ್ ಮಾತನಾಡಿ, ಯಾವುದೇ ಕಾರಣಕ್ಕೂ ಅಪ್ರಾಪ್ತ ಮಕ್ಕಳು ವಾಹನಗಳನ್ನು ಚಾಲನೆ ಮಾಡಬಾರದು. 18 ವರ್ಷ ತುಂಬದೇ ವಾಹನ ಚಲಾಯಿಸುವ ಮಕ್ಕಳ ಪಾಲಕರಿಗೆ 25,000 ರೂ, ದಂಡ ಹಾಗೂ ಶಿಕ್ಷೆಯನ್ನು ವಿಧಿಸಲಾಗುತ್ತದೆ. 18 ವರ್ಷ ತುಂಬಿದ ನಂತರ ಸಾರಿಗೆ ಇಲಾಖೆಯಿಂದ ವಾಹನ ಪರವಾನಿಗೆ ಪಡೆದುಕೊಂಡು ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆರ್.ಮಹಾದೇವಸ್ವಾಮಿ, ಸಾರಿಗೆ ಇಲಾಖೆಯ ಇನ್ಸ್‌ಪೆಕ್ಟರ್ ಯೋಗೇಶ್, ಜೆ.ಎಸ್.ಶ್ರೀಧರ್, ಸಾರಿಗೆ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಅಷ್ಟೇ ಸಾವು-ನೋವುಗಳು ಆಗುತ್ತಿದೆ. ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳು ವಾಹನ ಚಾಲನೆ ಮಾಡಬಾರದು. ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜನರು ಹೆಚ್ಚಿನ ಜಾಗೃತಿ ವಹಿಸಬೇಕಿದೆ.
ಮಂಜುನಾಥ್ ಪ್ರಸನ್ನ, ಉಪನಿರ್ದೇಶಕ, ಪದವಿಪೂರ್ವ ಶಿಕ್ಷಣ ಇಲಾಖೆ, ಚಾಮರಾಜನಗರ