ರಸ್ತೆಗಳ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ

24M.D.R.1
Published on

ಮದ್ದೂರು: ತಾಲೂಕಿನ ರಸ್ತೆಗಳನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪಟ್ಟಣದ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ವಿಭಾಗೀಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.


ಪಟ್ಟಣದ ಪ್ರವಾಸಿ ಮಂದಿರದಿಂದ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗೀಯ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಕಚೇರಿ ಎದುರು ಜಮಾಯಿಸಿ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಡಿ.ಪಿ.ಅರುಣ್‌ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಸಣ್ಣಪುಟ್ಟ ರಸ್ತೆಗಳೆಲ್ಲವೂ ಸಂಪೂರ್ಣ ಹದಗೆಟ್ಟಿದ್ದು, ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಿಂಚಿತ್ತು ಗಮನಹರಿಸಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.


ಜಿಲ್ಲಾ ಹೆದ್ದಾರಿ, ರಾಜ್ಯ ಹೆದ್ದಾರಿ, ಪಟ್ಟಣ, ಗ್ರಾಮಾಂತರ ಪ್ರದೇಶಗಳು ಹಾಗೂ ಹೊಲಗದ್ದೆಗಳಿಗೆ ಹೋಗುವ ರಸ್ತೆಗಳು ತೀರ ಹದಗೆಟ್ಟಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಅಲ್ಲದೆ ಅಪಘಾತಗಳು ಸಂಭವಿಸಿ ಸಾವು-ನೋವುಗಳಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೆ, ಮುಂದಿನ ದಿನಗಳಲ್ಲಿ ರಸ್ತೆಗಳನ್ನು ದುರಸ್ತಿಗೆ ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಳಿಕ ಕಚೇರಿಯ ವ್ಯವಸ್ಥಾಪಕ ಕೃಷ್ಣಕುಮಾರ್ ಅವರಿಗೆ ಪ್ರತಿಭಟನಾಕಾರರಿಂದ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಅನಿತಾ, ನಾಗಮ್ಮ, ಬಸವರಾಜು, ಶಿವರಾಜು, ಗಾಳಿಹೊನ್ನಯ್ಯ, ಶಿವಲಿಂಗಮ್ಮ, ಭಾಗ್ಯಾ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net