ರಾಗಿ, ಭತ್ತ ಖರೀದಿಸಲು ಬೆಂಬಲ ಬೆಲೆ ನಿಗದಿ

mysore
Published on

ಮೈಸೂರು: ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಗುಣಮಟ್ಟದ ರಾಗಿ, ಭತ್ತ ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ. ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 2300 ರೂ., ರಾಗಿ ಕ್ವಿಂಟಾಲ್‌ಗೆ 4290 ರೂ. ಇದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಕುರಿತು ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ. ಸರ್ಕಾರದ ಮಾನದಂಡಗಳ ಅನ್ವಯ ಎಫ್‌ಎಕ್ಯು ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸೂಕ್ತ ದಾಸ್ತಾನಿಗಾಗಿ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತ, ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ನೀಡಿದರು.

ಭತ್ತ, ರಾಗಿ ಮಾರಾಟ ಮಾಡಬೇಕಾದ ರೈತರು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳೆದ ಭತ್ತ, ರಾಗಿಯನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತ, ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ಅವರು ತಿಳಿಸಿದರು.

ಭತ್ತ, ರಾಗಿ ಖರೀದಿ ನೋಂದಣಿ ಪ್ರಾರಂಭವಾಗುವ ದಿನಾಂಕ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು, ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಕುಮುದಾ ಶರತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ರವಿ, ವಾರ್ತಾಧಿಕಾರಿ ಟಿ.ಕೆ.ಹರೀಶ್, ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net