ರಾಜಕೀಯ ಚಟುವಟಿಕೆಗಳಿಗೆ ಧಾರ್ಮಿಕ ಸಂಸ್ಥೆಗಳು ಬಳಕೆಯಾಗದಿರಲಿ : ಜಿಲ್ಲಾ ಚುನಾವಣಾಧಿಕಾರಿ ಸೂಚನೆ ಆದೇಶ

ರಾಜಕೀಯ ಚಟುವಟಿಕೆಗಳಿಗೆ ಧಾರ್ಮಿಕ ಸಂಸ್ಥೆಗಳು ಬಳಕೆಯಾಗದಿರಲಿ : ಜಿಲ್ಲಾ ಚುನಾವಣಾಧಿಕಾರಿ ಸೂಚನೆ ಆದೇಶ
Published on

ಹಾಸನ: ಚುನಾವಣಾ ಆಯೋಗವು ಮಾ.29ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಿದೆ. ಅದರಂತೆ ಮೇ 15 ರವರೆಗೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ರಾಜಕೀಯ ಉದ್ದೇಶಕ್ಕಾಗಿ ಧಾರ್ಮಿಕ ಸಂಸ್ಥೆಗಳನ್ನು ದುರುಪಯೋಗ ಮಾಡುವ ಕುರಿತಂತೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸೂಚನೆ ನೀಡಿದ್ದಾರೆ.

ಸದರಿ ನಿಯಮಗಳ ಅನ್ವಯ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಧಾರ್ಮಿಕ ಸಂಸ್ಥೆಗಳನ್ನು ದುರಪಯೋಗ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯ ಎಲ್ಲಾ ಎ.ಬಿ.ಸಿ ವರ್ಗದ ಮುಜರಾಯಿ ಮತ್ತು ಖಾಸಗಿ ದೇವಾಲಯಗಳು ಹಾಗೂ ಚರ್ಚ್, ಮಸೀದಿ, ಇತರೆ ಎಲ್ಲಾ ಧಾರ್ಮಿಕ ಸಂಸ್ಥೆಗಳ ಅಧಿಕಾರಿಗಳು, ಮುಖ್ಯಸ್ಥರು, ಸಿಬ್ಬಂದಿ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಮುಜರಾಯಿ ಮತ್ತು ಖಾಸಗಿ ದೇವಾಲಯ ಹಾಗೂ ಚರ್ಚ್, ಮಸೀದಿ, ಇತರೆ ಎಲ್ಲಾ ಧಾರ್ಮಿಕ ಸಂಸ್ಥೆಗಳಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳ ಸಂಪೂರ್ಣ ವಿವರಗಳನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ನೀಡಬೇಕು ಹಾಗೂ ಜನಸಂದಣಿಯಾಗುವ ಮುಂಚಿತವಾಗಿಯೇ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಒದಗಿಸುವಂತೆ ತಿಳಿಸಿದ್ದಾರೆ.

ಚುನಾವಣಾಧಿಕಾರಿಗಳು ಎಫ್‌ಎಸ್‌ಟಿ ಮತ್ತು ವಿಎಸ್‌ಟಿ ತಂಡವನ್ನು ತಮ್ಮ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸಂಸ್ಥೆಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಕಳುಹಿಸಿ ಯಾವುದೇ ರಾಜಕೀಯ ವ್ಯಕ್ತಿ, ಮುಖಂಡರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆಯೇ, ಮಾತನಾಡಿದ್ದಾರೆಯೇ ಎಂದು ಪರಿಶೀಲಿಸುವಂತೆ ಸೂಚಿಸಿ, ಯಾವುದೇ ಧಾರ್ಮಿಕ ಸಂಸ್ಥೆಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಬಾರದೆಂದು ಸ್ವಷ್ಟವಾಗಿ ತಿಳಿಸಿದ್ದಾರೆ.

ಯಾವುದೇ ವ್ಯಕ್ತಿಯು ಆದೇಶ ಉಲ್ಲಂಘನೆ ಮಾಡಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆ ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net