ರಾಜ್ಯ ಆರ್ಥಿಕ ಸಂಕಷ್ಟದಲ್ಲಿ ಇಲ್ಲ

cm in hubballi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಬಿಜೆಪಿಯವರು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಣದ ಕೊರತೆಯಿಂದ ಯಾವ ಕೆಲಸ ನಿಂತಿದೆ ಎಂದು ಬಿಜೆಪಿಯವರು ಹೇಳಬೇಕು. ಬಜೆಟ್​ನಲ್ಲಿ ಘೊಷಿಸಿದ ಎಲ್ಲ ಕಾರ್ಯಕ್ರಮ, ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ ಎಂದರು.

ಒಂದೆಡೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾರೆ. ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಘೊಷಿಸುತ್ತಾರೆ. ಬಿಜೆಪಿಗೆ ಸ್ಪಷ್ಟವಾದ ನಿಲುವು ಇಲ್ಲ. ಇಂಥ ಇಬ್ಬಗೆ ನೀತಿ ಬಿಡಬೇಕು ಎಂದು ಹೇಳಿದರು.

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ದುರದೃಷ್ಟಕರ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಪೆ ದರ್ಜೆಯ ಔಷಧಿ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಂಡಿದ್ದೇವೆ. ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಿದ್ದೇವೆ. ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಅವರು ವರದಿ ನೀಡಿದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು. ಮೃತಟಟ್ಛಿಟಿ ಬಾಣಂತಿಯರ ಕುಟುಂಬಕ್ಕೆ ತಲಾ5 ಲಕ್ಷ ರೂ. ಪರಿಹಾರ ನೀಡುವಂತೆಯೂ ಅದೇಶಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಟೆಂಡರ್ ಕರೆಯದೇ ಹತ್ತು ಪಟ್ಟು ಹೆಚ್ಚಿಗೆ ದರದಲ್ಲಿ ಔಷಧ, ಉಪಕರಣಗಳನ್ನು ಬಿಜೆಪಿಯವರು ಖರೀದಿ ಮಾಡಿದ್ದರು ಎಂದು ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಸೋಮವಾರ ಆರಂಭಗೊಳ್ಳುವ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಚರ್ಚೆ ಮಾಡುತ್ತೇವೆ. ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ನಾವು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net