

ಕೇಂದ್ರದ ಹಣ ಗ್ಯಾರಂಟಿಗೆ ಬಳಕೆ
| ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ
| ವಿ.ಪ ನಾಯಕ ಆರ್.ಅಶೋಕ ಆರೋಪ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿ ಆಗಿದೆ. ಗ್ಯಾರಂಟಿ ಯೋಜನೆಗೆ ನೀಡಲು ಹಣವಿಲ್ಲ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಸ್ವಾಭಾವಿಕವಾಗಿ ಎನ್‌ಡಿಆರ್‌ಎಫ್ ಹಣ ಬರುತ್ತದೆ. ಇದೇ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ,ರಾಜ್ಯದಲ್ಲಿ ಅಭಿವೃದ್ಧಿ ಮರಿಚಿಕೆಯಾಗಿದೆ ಎಂದು ವಿರೋದ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಚಿಕ್ಕೋಡಿ ಪಟ್ಟಣ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಬೆಳೆ ಹಾನಿ ನೀಡಬೇಕು. ಖಜಾನೆ ಖಾಲಿಯಾಗಿದೆ. ಎಸ್ಸಿ ಎಸ್ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದೆ. ಈಗ ಎನ್‌ಡಿಆರ್‌ಫ್ ಹಣ ಬಳಸಿಕೊಳ್ಳುತ್ತಿದೆ ಎಂದು ದೂರಿದರು.
ರೈತರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತೋಗಿದೆ.ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ರೈತರು ಸಂಕಷ್ಟಕ್ಕಿಡಾಗಿದ್ದಾರೆ. ಸರ್ಕಾರಕ್ಕೆ ಪ್ರವಾಹ ಪರಿಸ್ಥಿತಿ ಕಾಣುತ್ತಿಲ್ಲ , ಪರಿಹಾರ ನೀಡುವ ಯೋಗ್ಯತೆ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ನಂತರ ಕಾಗವಾಡ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ ನೀಡಿತು.
ಶಾಸಕರಾದ ಶಶಿಕಲಾ ಜೊಲ್ಲೆ, ದುರ್ಯೋದನ ಐಹೋಳೆ, ಸಿದ್ದು ಸವದಿ, ನಿಖಿಲ್ ಕತ್ತಿ,ಮಾಜಿ ಶಾಸಕ ಸಂಜಯ ಪಾಟೀಲ ಇತರರಿದ್ದರು.