

ಚಾಮರಾಜನಗರ: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗವಿಕಲರು ಮತ್ತು ಹಾರೈಕೆದಾರರ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಆಯಕ್ತ ದಾಸ್ ಸೂರ್ಯವಂಶಿ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ಅನುಷ್ಠಾನ ಮತ್ತು ವಿಕಲಚೇತನರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 15000 ಅಂಗವಿಕಲ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲು ಚಿಂತನೆ ನಡೆಸಲಾಗಿದೆ. ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗವಿಕಲರು ಮತ್ತು ಆರೈಕೆದಾರರ ಗುಂಪುಗಳನ್ನು ರಚನೆ ಮಾಡಬೇಕು. ಪ್ರತಿ ಗುಂಪಿನಲ್ಲುಯೂ 8 ಜನರು ಇರುವಂತೆ ನೋಡಿಕೊಳ್ಳಬೇಕು. ಈ ನಿಟ್ಟನಲ್ಲಿ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.
ಸಮಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುನಿರಾಜ್ ಮಾತನಾಡಿ, ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 8000 ಮಕ್ಕಳು ಶಿಕ್ಷಣ ಕಲಿಯುತ್ತಿದ್ದಾರೆ. ಅದರಲ್ಲಿ ಕೇವಲ 5 ಅಂಗವಿಕಲ ಮಕ್ಕಳು ಇದ್ದಾರೆ ಎಂದು ಮಾಹಿತಿ ನೀಡಿದರು. ಈ ವೇಳೆ ಆಯಕ್ತ ದಾಸ್ ಸೂರ್ಯವಂಶಿ ಪ್ರತಿಕ್ರಿಯಿಸಿ, 8000 ಮಕ್ಕಳಿಗೆ ಶೇ.10 ರಷ್ಟು ಮಕ್ಕಳಾದರೂ ವಸತಿ ಶಾಲೆಗಳಲ್ಲಿ ಶಿಕ್ಷಣ ಕಲಿಯಬೇಕಿತ್ತು. ಈ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಹೆಚ್ಚಿನ ಜಾಗೃತಿ ಮೂಡಿಸಬೇಕು. ವಸತಿ ಶಾಲೆಗಳ ಪ್ರವೇಶಾತಿ ಪರೀಕ್ಷೆಯನ್ನು ಸಡಿಲಗೊಳಿಸಿ, ಶೇ.25 ರಷ್ಟ್ರು ಅಂಗವಿಕಲತೆ ಇದ್ದರೂ ಅವರಿಗೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಜಿಲ್ಲೆಯಲ್ಲಿರುವ 1108 ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1023 ಅಂಗವಿಕಲ ಮಕ್ಕಳು ಶಿಕ್ಷಣ ಕಲಿಯುತ್ತಿದ್ದಾರೆ. ಶಾಲೆಗೆ ಬರಲು ಆಗದ ಮಕ್ಕಳನ್ನು ದಾಖಲು ಮಾಡಿಕೊಂಡು ಅವರಿಗೆ ಬರುವ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎ್ ಕಾರ್ಯಕ್ರಮದ 4 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಇಲಾಖೆಯ ನೇಮಕಾತಿ ಮತ್ತು ವಿಶೇಷವಾಗಿ ಬಡ್ತಿಯಲ್ಲೂ ಅಂಗವಿಕಲರಿಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಆಯಕ್ತ ದಾಸ್ ಸೂರ್ಯವಂಶಿ ಪ್ರತಿಕ್ರಿಯಿಸಿ, ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಶಾಲೆಗಳಲ್ಲಿ ಬ್ರೈಲ್‌ಲಿಪಿ ಕಲಿಕೆಗೆ ಹೆಚ್ಚಿನ ಒತ್ತು ನೀಡಲು ಕ್ರಮವಹಿಸಬೇಕು. ಈ ಮೂಲಕ ಅಂಧ ಮ್ಕಳು ಮುಖ್ಯವಾಹಿನಿಗೆ ಬರಲು ನೆರವಾಗಬೇಕಿದೆ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪಿ.ಲಕ್ಷ್ಮೀ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.