

ಶನಿವಾರಸಂತೆ: ರಾಜ್ಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಅನ್ನು ಸಂಪೂರ್ಣ ನಿಷೇಧ ಮಾಡಬೇಕು ಎಂಬ ಚಿಂತನೆ ಮಾಡಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿಗೆ ಬುಧವಾರ ಭೇಟಿ ನೀಡಿದ ಸಚಿವರು ಶಾಲಾ ಆವರಣದಲ್ಲಿ ಗಿಡ ನೆಟ್ಟು ನೀರು ಹಾಕಿ ಪರಿಸರ ಜಾಗೃತಿ ಮೂಡಿಸಿ ಮಾತನಾಡಿ, ದಿನನಿತ್ಯ ತ್ಯಾಜ್ಯ, ಪ್ಲಾಸ್ಟಿಕ್ ಹಾಗೂ ವಾಹನಗಳಿಂದ ಹೊರಬರುತ್ತಿರುವ ಹೊಗೆಯಿಂದ ಆಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಬೇಕಾಗಿದೆ. ಪ್ರತಿಯೊಬ್ಬರೂ ಈ ವರ್ಷ ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಕೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಬೇಕು ಎಂದು ಸಲಹೆ ನೀಡಿದರು.
ರಾಸಾಯನಿಕಯುಕ್ತ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳನ್ನು ಉಪಯೋಗಿಸಿದರೆ ಪರಿಸರಕ್ಕೆ ಹಾನಿಯಾಗುವುದರ ಜತೆಗೆ ಜನರಿಗೆ ಅಪಾಯ ಉಂಟಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಪರಿಸರಸ್ನೇಹಿ ಗಣೇಶೋತ್ಸವ ಆಚರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪರಿಸರ ಸಂರಕ್ಷಣೆ ಹಾಗೂ ಜಾಗೃತಿಗಾಗಿ ಈ ವರ್ಷ ರಾಜ್ಯಾದ್ಯಂತ ಸುಮಾರು 5 ಕೋಟಿಗೂ ಹೆಚ್ಚಿನ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಕೊಡಗು ಹಾಗೂ ಹಾಸನ ಭಾಗದಲ್ಲಿ ಹಸಿರು ಪ್ರದೇಶ ವ್ಯಾಪಕವಾಗಿದೆ. ಈ ಹಿನ್ನೆಲೆಯಲ್ಲಿ ವನ್ಯಜೀವಿ ಮಾನವ ಸಂಘರ್ಷ ಕಳೆದ ಅನೇಕ ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದೆ. ಇದರಿಂದ ಮಾನವ ಹಾನಿ ತಡೆಗಟ್ಟುವ ಕೆಲಸ ಮಾಡಬೇಕಾಗಿದೆ. ಆನೆ ತುಳಿತ ಮತ್ತು ಹುಲಿ ಹಾವಳಿಯಿಂದ ಹಲವಾರು ಜನರು ಜೀವ ಕಳೆದುಕೊಂಡಿದ್ದಾರೆ. ಪ್ರಕೃತಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕೃತಿಯೊಂದಿಗೆ ಪಶು, ಪಕ್ಷಿ, ಕೀಟಗಳು, ವನ್ಯಜೀವಿಗಳನ್ನು ಸಂರಕ್ಷಣೆ ಮಾಡಬೇಕಾಗಿದೆ ಎಂದರು.
ವಕೀಲ ಚಂದ್ರಮೌಳಿ ಅವರು ಕಡಿಮೆ ಶುಲ್ಕದಲ್ಲಿ ಗ್ರಾಮೀಣ ಪ್ರದೇಶದ ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಅವರ ತಂದೆ-ತಾಯಿ ಹೆಸರಿನಲ್ಲಿ ಪದವಿ, ಪಿಯು ಹಾಗೂ ಪ್ರೌಢಶಾಲೆ ಒಳಗೊಂಡ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿರುವುದು ಶ್ಲಾಘನೀಯ. ಇವರು ಸಮಾಜಕ್ಕೆ ಉತ್ತಮ ಕೊಡಗೆ ನೀಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಇವರ ಸಾಮಾಜಿಕ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷರೂ ಆದ ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ, ಕೊಡಗು ಜಿಲ್ಲಾ ಕಾಂಗ್ರೆಸ್ ಸದಸ್ಯ ಲಕ್ಷ್ಮಣ್, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಖಜಾಂಜಿ ಡಾ.ಉದಯಕುಮಾರ್, ನಿರ್ದೇಶಕರಾದ ಯು.ವಿ.ಶಿವಪ್ರಸಾದ್, ಬಿ.ಕೆ.ಯತೀಶ್, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನೀಫ್, ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪಿ.ಪ್ರಫುಲ್ ಶೆಟ್ಟಿ, ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರಂಜನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಪವಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಎಂ.ಎನ್.ಅಬ್ದುಲ್ ರಬ್ ಇದ್ದರು.
ಪೊಟೋ 6ಎಸ್ ಎಸ್ 3
ಅರಣ್ಯ ಸಚಿವರನ್ನು ಸ್ವಾಗತಿಸುತಿರುವುದು.