ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲುವು ನಿಶ್ಚಿತ : ಸಿದ್ದರಾಮಯ್ಯ ವಿಶ್ವಾಸ

Siddaramiah
Published on

ಮೈಸೂರು: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯದ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದ್ದು, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ. ಬಹುತೇಕ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ನಮ್ಮ ಮತಗಳನ್ನು ಕಬಳಿಸಿದ್ದಾರೆ. ಹೀಗಾಗಿ ಗುಜರಾತ್‌ನಲ್ಲಿ ಹಿನ್ನಡೆಯಾಗಿದೆ ಎಂದರು.

ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು, ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರೆತ್ತಿದೆ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಬಹಳಷ್ಟು ಹಣ ಖರ್ಚು ಮಾಡಿದೆ, ನನಗಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವೇ ಆಮ್ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್ ಮತಗಳನ್ನು ಒಡೆಯುವ ತಂತ್ರ ಮಾಡಿದೆ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಾರ್ಟಿ ನಮ್ಮ ಪಕ್ಷದ ಶೇ.10 ರಷ್ಟು ಮತಗಳನ್ನು ಕಸಿದಿದೆ. ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷ ಇಲ್ಲ, ಹಾಗಾಗಿ ಜೆಡಿಎಸ್ ಜತೆ ಬಿಜೆಪಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಯಾವ ಲಾಭ ಆಗುವುದಿಲ್ಲ ಎಂದರು.

ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ. ನರೇಂದ್ರ ಮೋದಿ ಹವಾ ರಾಜ್ಯದಲ್ಲಿ ಇಲ್ಲ. ನರೇಂದ್ರ ಮೋದಿ ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರುತ್ತಾ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net