ಸಕಲೇಶಪುರ: ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ಮೂಲಕ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್ ದೂರಿದರು.
ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಗೊಂದಲಗಳು ರಾಜ್ಯದಲ್ಲಿ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರ್ಕಾರದ ವಿವೇಚನೆ ಇಲ್ಲದೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತಿದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಇದು ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆ ಇದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗುತ್ತಿರುವುದನ್ನು ಗಮನಿಸಿ ವಕ್ಫ್ ಬೋರ್ಡ್ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈ ಹಾಕಿದೆ. ರಾಜ್ಯದಲ್ಲಿ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿದ್ದಾರೆ. ಇದನ್ನು ವಿರೋಧಿಸಿ ಪಟ್ಟಣದಲ್ಲಿರುವ ತಾಲೂಕು ಕಚೇರಿಗೆ ನ.7ರಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ರಾಜ್‌ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಕೇವಲ ಒಂದು ವರ್ಗದ ಪರವಾಗಿ ನಿಂತಿದೆ. ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೆ ನೇರ ಹೊಣೆಯಾಗಬೇಕಾಗುತ್ತದೆ. ಮುಸ್ಲಿಂ ಓಲೈಕೆ ಹಾಗೂ ಹಿಂದು ವಿರೋಧಿ ನಿರ್ಧಾರಗಳನ್ನು ಕಾಂಗ್ರೆಸ್ ಕೈಬಿಡಬೇಕೆಂದು ಆಗ್ರಹಿಸಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧು ಬೊಮ್ಮನಕೆರೆ, ಅಗ್ನಿ ಸೋಮಶೇಖರ್, ಬಿಜೆಪಿ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಲೋಹಿತ್ ಕೌಡಹಳ್ಳಿ ಹಾಜರಿದ್ದರು.