ರಾಜ್ಯಾದ್ಯಂತ ಬಿಜೆಪಿ ಪ್ರವಾಸ

bjp
Published on

ಹುಬ್ಬಳ್ಳಿ : ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ತಂಡ ಅ. 9 ರಿಂದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದ ತಂಡ ಸೆ. 27ರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿವೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮೊದಲ ಹಂತದಲ್ಲಿ ಸಿಎಂ ಹಾಗೂ ಮಾಜಿ ಸಿಎಂ ನೇತೃತ್ವದ ತಂಡ 52 ವಿಧಾನಸಭೆ ಕ್ಷೇತ್ರಗಳಲ್ಲಿ ಸರ್ಕಾರಗಳ ಲಾನುಭವಿಗಳ ಸಭೆ ಹಾಗೂ ಸಾರ್ವಜನಿಕ ಸಮಾವೇಶಗಳನ್ನು ಸಂಘಟಿಸಲಿದೆ. ಪಕ್ಷದ ರಾಜ್ಯಾಧ್ಯಕ್ಷರ ತಂಡವು ಸಹ 52 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನಾತ್ಮಕ ಸಭೆ ನಡೆಸಲಿದೆ ಎಂದು ಹೇಳಿದರು.
ಬೆಂಗಳೂರು, ಹುಬ್ಬಳ್ಳಿ, ಬಳ್ಳಾರಿ, ಮೈಸೂರು, ಶಿವಮೊಗ್ಗ, ಕಲಬುರ್ಗಿಗಳಲ್ಲಿ ಬಿಜೆಪಿ ರೈತ, ಮಹಿಳಾ, ಪ. ಜಾತಿ, ಪಂಗಡ, ಅಲ್ಪಸಂಖ್ಯಾತ ಹಾಗೂ ಯುವ ಮೋರ್ಚಾಗಳ ಸಭೆಗಳನ್ನು ಅ. 9ರ ನಂತರ ಆಯೋಜಿಸಲಾಗಿದೆ. ಅ. 7ರಂದು ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ರಾಜ್ಯ ಉಸ್ತುವಾರಿ ಅರುಣಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ ಹಾಗೂ ಇನ್ನಿತರ ಪ್ರಮುಖರು ಪಾಲ್ಗೊಳ್ಳುವರು. ಪ್ರಧಾನಿ ನರೇಂದ್ರ ಮೋದಿ ಅವರು ತಿಂಗಳಿಗೆ ಒಮ್ಮೆಯಾದರೂ ರಾಜ್ಯಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದು, ಪ್ರಧಾನಿ ಅಥವಾ ಕೇಂದ್ರದ ಇತರ ಪ್ರಮುಖರು ಮೋರ್ಚಾಗಳ ಸಭೆಯಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆ. 17 ರಿಂದ ಅ. 2ರವರೆಗೆ ದೇಶದಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿದೆ. 17ರಂದು ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಈ ಬಾರಿ ದಾಖಲೆಯ 1.20 ಲಕ್ಷ ಯುನಿಟ್ ರಕ್ತ ಸಂಗ್ರಹಗೊಳ್ಳುವ ನಿರೀಕ್ಷೆ ಇದೆ. ರಕ್ತದ ಅಗತ್ಯ ಇದ್ದವರಿಗೆ ಈ ರಕ್ತವನ್ನು ದಾನ ಮಾಡಲಾಗುವುದು. ರಾಜ್ಯದಲ್ಲಿಯು ಸಹ 17 ಮತ್ತು 18ರಂದು ರಕ್ತದಾನ ಶಿಬಿರದ ಜತೆಗೆ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net