

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗಾಗಿ ಸೆ. 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಭಾನುವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಸಭಾ ವೇದಿಕೆಯ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದರು.
ಸ್ಥಳದ ಲಭ್ಯತೆಗೆ ಅನುಗುಣವಾಗಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. 1500-2000 ಜನರು ಸೇರುವಷ್ಟು ಸ್ಥಳಾವಕಾಶವಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು.
ಬಳಿಕ ದೇವಸ್ಥಾನದ ಪಾರ್ಕಿಂಗ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗಡಿ ಮಳಿಗೆಗಳು, ಫುಡ್‌ಕೋರ್ಟ್‌ಗೆ ಭೇಟಿ ಕೊಟ್ಟರು.
ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಇತರ ಅಧಿಕಾರಿಗಳು, ನಿಗಮ, ಮಂಡಳಿ ಅಧ್ಯಕ್ಷರು ಮತ್ತು ಮುಖಂಡರು ಇದ್ದರು.