

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಾ ಸಾಹೇಬ ಶಂಕರ ಜೊಲ್ಲೆ, ಮೇಯರ್ ಶಿವಕುಮಾರ್ ಇದ್ದರು.
ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿ ದಸರೆಗೆ ಚಾಲನೆ ನೀಡುವರು. ಇದೇ ಪ್ರಥಮ ಬಾರಿಗೆ ರಾಷ್ಟ್ರಪತಿ ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ.
ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ.