

ದಾವಣಗೆರೆ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ.9 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರ ಪರಿಹರಿಸಿಕೊಳ್ಳಬಹುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜಿಯಾಗಬಲ್ಲ ಎಲ್ಲ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಭೂಸ್ವಾಧೀನ ಪರಿಹಾರ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಎಂಎಂಡಿಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಬಹುದು ಎಂದರು.
ವಿಚ್ಛೇದನ ಹೊರತುಪಡಿಸಿ ಕೌಟುಂಬಿಕ ನ್ಯಾಯಾಲಯದ ಪ್ರಕರಣ, ಪಿಂಚಣಿ, ವೇತನ ಭತ್ಯೆ ಸಂಬಂಧಿಸಿದ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ ಹಾಗೂ ಕಾರ್ಮಿಕ ವಿವಾದ ಮೊದಲಾದ ಪ್ರಕರಣಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ರಾಜಿಗೆ ಅನುಕೂಲವಾಗಲು ರಾಜಿ ಪೂರ್ವ ಸಮಾಲೋಚನೆ ಸಹ ಆಯೋಜಿಸಲಾಗಿದೆ ಎಂದು ಹೇಳಿದರು.
ಜುಲೈನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 38500 ಪ್ರಕರಣಗಳಲ್ಲಿ 3950 ಪ್ರಕರಣ ಹಾಗೂ ಬ್ಯಾಂಕ್, ಖಾಸಗಿ ಹಣಕಾಸು ಸಂಸ್ಥೆ, ಕಂದಾಯ ಇಲಾಖೆ ಹಾಗೂ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ಸೇರಿ ನ್ಯಾಯಾಲಯಕ್ಕೆ ಬರದಿರುವ ಸುಮಾರು 1,32,992 ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಆಗಸ್ಟ್ ಅಂತ್ಯದ ವೇಳೆಗೆ 39157 ಪ್ರಕರಣಗಳು ಬಾಕಿಯಿದ್ದು ಈ ಬಾರಿಯ ಲೋಕ ಅದಾಲತ್‌ನಲ್ಲಿ ಸುಮಾರು 5 ಸಾವಿರ ಪ್ರಕರಣ ಬಗೆಹರಿಸುವ ನಿರೀಕ್ಷೆಯಿದೆ. ಜಿಲ್ಲೆಯ ಎಲ್ಲ 25 ಕೋರ್ಟ್‌ಗಳಲ್ಲಿ ರಾಜಿ ಸಂಧಾನ ನಡೆಯಲಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣನವರ ಮಾತನಾಡಿ, ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವುದು ಲೋಕ ಅದಾಲತ್‌ನ ಮುಖ್ಯ ಉದ್ದೇಶ. ಇದಕ್ಕಾಗಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್, ಕಾರ್ಯದರ್ಶಿ ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು.