ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆ ಸದ್ಯಕ್ಕಿಲ್ಲ

SRP 1
ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಶುಕ್ರವಾರ ರೈತ ಸಂಘದ ಸದಸ್ಯರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ಬಡಗಲಪುರ ನಾಗೇಂದ್ರ, ಕೆಂಪೂಗೌಡ, ದರ್ಶನ್ ಪುಟ್ಟಣ್ಣಯ್ಯ,ಪ್ರಸನ್ನಗೌಡ ಇತರರಿದ್ದರು.
Published on

ಶ್ರೀರಂಗಪಟ್ಟಣ: ರಾಜ್ಯ ರೈತ ಸಂಘದಿಂದ ಸೆ. 11ರಂದು ಕರೆ ನೀಡಿದ್ದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಸಂಘದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ರಮೇಶ ಬಂಡಿಸಿದ್ದೇಗೌಡ ಅವರನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಚರ್ಚಿಸಿದ ಪರಿಣಾಮ, ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಅಲ್ಲದೆ, ಕಬ್ಬಿಗೆ ಎಸ್‌ಎಪಿ ಪರಿಷ್ಕೃತ ದರ ನಿಗದಿ ಮಾಡುವ ಕುರಿತು ಸಕ್ಕರೆ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ದೇಶಿತ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಜಲಾಶಯದಿಂದ ಸಾಕಷ್ಟು ನೀರು ತಮಿಳುನಾಡಿಗೆ ಹರಿದಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ 1 ಕಟ್ಟು ನೀರು ಲಭಿಸುವುದೂ ಅನುಮಾನವಾಗಿದೆ. ಹೀಗಾಗಿ, ಸೆ.11ರಂದು ದೆಹಲಿಯಲ್ಲಿ ಕರೆದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಪರ ಸಮರ್ಥ ವಾದ ಮಂಡಿಸಿ ನೀರು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಕೀಲರ ಮೂಲಕ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ನ್ಯಾಯ ದೊರಕುವ ವಿಶ್ವಾಸವಿದೆ. ಸೆ.11 ರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪು, ರಾಜ್ಯ ಸರ್ಕಾರದ ಮುಂದಿನ ನಡೆಯನ್ನು ಗಮನಿಸಲಾಗುವುದು. ಒಂದು ವೇಳೆ ಹಿನ್ನಡೆ ಉಂಟಾದಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ತಡೆ ಹಾಕುವುದರ ಜತೆಗೆ, ಕಾವೇರಿ ಜಲಾನಯನ ಪ್ರದೇಶದ 12 ಜಿಲ್ಲೆಗಳಲ್ಲೂ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಸರ್ವೋದಯ ಕರ್ನಾಟಕ ಪಕ್ಷದ ಪ್ರಸನ್ನಗೌಡ, ಪಾಂಡವಪುರ ತಾಲೂಕು ಅಧ್ಯಕ್ಷ ನಾಗಣ್ಣ, ಕಾರ್ಯದರ್ಶಿ ಕೆನ್ನಾಳು ವಿಜಯ್ ಕುಮಾರ್, ಮುಖಂಡ ಹರವು ಪ್ರಕಾಶ್, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ಶಂಕರೇಗೌಡ, ಮುಖಂಡರಾದ ನೆಲಮನೆ ಶಂಭೂಗೌಡ, ಕಡತನಾಳು ಬಾಲಕೃಷ್ಣ, ಎಂ.ಶೆಟ್ಟಹಳ್ಳಿ ಪುರುಷೋತ್ತಮ್, ವೈ.ಕೆ.ರಮೇಶ್, ರೇಡಿಯೋ ರಮೇಶ್, ದೊಡ್ಡಪಾಳ್ಯ ಜಯರಾಮೇಗೌಡ, ಮಡಿವಾಳ ಮಾಚಿದೇವಾ ಸಂಘಟನೆ ಅಧ್ಯಕ್ಷ ಮರಳಗಾಲ ಮಂಜುನಾಥ್, ದಸಂಸ ಮುಖಂಡ ಬಿ.ಆರ್.ಕೊಪ್ಪಲು ಚಂದ್ರಶೇಖರ್ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net