

ಕುಶಾಲನಗರ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಗೆ ಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದಕ್ಕೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಸಂಭ್ರಮಾಚರಣೆ ನಡೆಸಿದರು.
ಈ ತಡೆಯಾಜ್ಞೆಯು ನ್ಯಾಯದ ಮೊದಲ ಮೆಟ್ಟಿಲು. ಇದು ಸತ್ಯ ಮತ್ತು ಪ್ರೀತಿಗೆ ಸಂದ ಜಯ ಎಂದು ಘೋಷಣೆ ಕೂಗಿದ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.
ಈ ಆದೇಶದಿಂದ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದುರ್ಬಲರ ಪರವಾದ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಶಶಿಧರ ಹೇಳಿದರು.
ಕೆಪಿಸಿಸಿ ಸದಸ್ಯ ಮಂಜುನಾಥ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯರಾದ ದಿನೇಶ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಕುಮಾರ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಶಿವಶಂಕರ, ಮುಖಂಡರಾದ ನಟೇಶ ಗೌಡ, ಶಾಜಿ, ಆದಮ್, ಜಗದೀಶ, ಹರೀಶ ಇತರರು ಉಪಸ್ಥಿತರಿದ್ದರು.