ರಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಿ

17-07-Shiva-2
ರಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ರಾಯಚೂರಿನ ರಿಮ್ಸ್ ಆಸ್ಪತ್ರೆ ಮುಂದೆ ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಸಮಿತಿ ಜಿಲ್ಲಾ ಸಂಚಾಲಕ ಎಸ್.ನರಸಿಂಹಲು, ಪದಾಕಾರಿಗಳಾದ ಕ್ರುದ್ದೀನ್ ಅಲಿ, ಮಹ್ಮದ್, ವಿಜಯಕುಮಾರ, ಭೀಮೇಶ, ಹನುಮಂತ, ಜಿ.ನರಸಿಂಹ, ಎಲ್.ವಿ.ಸುರೇಶ ಇದ್ದರು.
Published on

ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಿ ರೋಗಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯ ರಿಮ್ಸ್ ಆಸ್ಪತ್ರೆ ಮುಂದೆ ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಂತರ ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರಗೆ ಮನವಿ ಸಲ್ಲಿಸಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ರೋಗಿಗಳಿಗೆ ಹೊರಗಡೆ ಔಷಧ ತರುವಂತೆ ತಿಳಿಸುತ್ತಿರುವುದಕ್ಕೆ ತಡೆಯೊಡ್ಡಬೇಕು ಎಂದು ಒತ್ತಾಯಿಸಿದರು.
ಆಸ್ಪತ್ರೆಯಲ್ಲಿ 700 ಹಾಸಿಗೆಗಳ ವ್ಯವಸ್ಥೆಯಿದ್ದರೂ ಬಡ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರು ಬೆಳಗ್ಗೆ ಬಂದು ಸಹಿ ಮಾಡಿ ತಮ್ಮ ಖಾಸಗಿ ಆಸ್ಪತ್ರೆಗೆ ತೆರಳುತ್ತಿದ್ದು, ವೈದ್ಯರು ಸಮಯಕ್ಕೆ ಸರಿಯಾಗಿ ದೊರೆಯದಂತಾಗಿದೆ. ಆಡಳಿತ ವ್ಯವಸ್ಥೆಗೆ ನಿಯಂತ್ರಣವಿಲ್ಲದಂತಾಗಿದೆ.
ಕುಡಿಯುವ ನೀರು, ಶೌಚಾಲಯ ಸೇರಿದಂತೆ ಕನಿಷ್ಠ ಮೂಲ ಸೌಕರ್ಯಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲ. ರೋಗಿಗಳಿಗೆ ಉಚಿತವಾಗಿ ಔಷಧ ವಿತರಿಸುವ ಬದಲು ಹೊರಗಡೆಯಿಂದ ಔಷಧ ತರುವಂತೆ ವೈದ್ಯರು ಚೀಟಿ ಬರೆದುಕೊಡುತ್ತಿದ್ದಾರೆ. ಕೂಡಲೇ ಅವ್ಯವಸ್ಥೆಯನ್ನು ಸರಿಪಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಎಸ್.ನರಸಿಂಹಲು, ಪದಾಕಾರಿಗಳಾದ ಕ್ರುದ್ದೀನ್ ಅಲಿ, ಮಹ್ಮದ್, ವಿಜಯಕುಮಾರ, ಭೀಮೇಶ, ಹನುಮಂತ, ಜಿ.ನರಸಿಂಹ, ಎಲ್.ವಿ.ಸುರೇಶ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net