ರೈತರ ಜಮೀನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಬೂವನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ

ರೈತರ ಜಮೀನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಬೂವನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ
Published on

ಹಾಸನ: ರೈತರ ಜಮೀನಿಗೆ ಪರಿಹಾರ ನೀಡದೆ ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಈ ಹಿಂದೆ ಇದ್ದ ರಸ್ತೆಯನ್ನು ಒತ್ತುವರಿ ಮಾಡಿ ಕಾಂಪೌಂಡ್ ಹಾಕಲಾಗಿದೆ ಎಂದು ಆರೋಪಿಸಿ ನಗರದ ಹೊರ ವಲಯದ ಬೂವನಹಳ್ಳಿಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಜಾಗದಲ್ಲಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
ವಿಮಾನ ನಿಲ್ದಾಣದ ಬಳಿ ಜಮಾಯಿಸಿದ ಪ್ರತಿಭಟನಕಾರರು ಕೆ.ಐ.ಎ.ಡಿ.ಬಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಹಾಗೂ ಒತ್ತುವರಿ ಮಾಡಿರುವ ರಸ್ತೆ ಬಿಟ್ಟು ಕೊಡದೆ ಇದ್ದರೆ ಕೆಲಸ ಮಾಡಲು ಬಿಡುವುದಿಲ್ಲ ಎಂದು ಆಗ್ರಹಿಸಿದರು.
ಈ ಪ್ರದೇಶದಲ್ಲಿ ಬೂವನಹಳ್ಳಿ, ಲಕ್ಷ್ಮಿ ಸಾಗರ, ಎಸ್.ದ್ಯಾವಲಾಪುರ, ಜಿ.ಮೈಲನಹಳ್ಳಿ, ತೆಂಡಿಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಈ ಹಿಂದೆ ಇದ್ದ ಹಳೇ ರಸ್ತೆಯನ್ನು ಒತ್ತುವರಿ ಮಾಡಿ ಕಾಂಪೌಂಡ್ ಹಾಕಲಾಗಿದೆ. ಇದರಿಂದ ಗ್ರಾಮಸ್ಥರಿಗೆ ತುಂಬಾ ಅನನುಕೂಲವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ಈಗಾಗಲೇ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದು, ಈವರೆಗೆ ರೈತರ ಪರವಾಗಿ ಕೆಲಸ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ಈ ಬಗ್ಗೆ ಗಮನಹರಿಸಿ ನಮ್ಮ ಸಮಸ್ಯೆ ಬಗೆ ಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸರ್ಕಾರ ತುರ್ತಾಗಿ ಭೂ ಮಾಲೀಕರಿಗೆ ಪರಿಹಾರ ನೀಡಬೇಕು ಹಾಗೂ ಸಂಪರ್ಕ ರಸ್ತೆ ನಿರ್ವಹಣೆ ಮಾಡಿ ಸುತ್ತಮುತ್ತಲ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳದಲ್ಲೇ ಗುಡಿಸಲು ನಿರ್ಮಿಸಿ ಪ್ರತಿಭಟನೆ ಮುಂದುವರಿಸುವ ಮೂಲಕ ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ತಾಪಂ ಮಾಜಿ ಸದಸ್ಯ ಜಯರಾಂ, ಗ್ರಾಪಂ ಮಾಜಿ ಅಧ್ಯಕ್ಷ ಕರಿಯಯ್ಯ, ತುಳಸಿರಾಂ, ಮಲ್ಲೇಶ್, ವಿಶ್ವನಾಥ್, ಲಕ್ಷ್ಮಣ್, ದಿನೇಶ್, ಮನು, ಶಿವರಾಂ, ದಿನೇಶ್, ಮನು ಹಾಗೂ ಸುತ್ತಮುತ್ತಲ ಗ್ರಾಮಸ್ಥರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net