ರೈತರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಭರವಸೆ

mysore
Published on

ಮೈಸೂರು: ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ರೈತರ ಕುಂದುಕೊರತೆಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕಾರ್ಖಾನೆಯ ಮಾಲೀಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಎರಡು ಸಕ್ಕರೆ ಕಾರ್ಖಾನೆಗಳಾದ ಚುಂಚನಕಟ್ಟೆಯ ಶ್ರೀರಾಮ ಸಕ್ಕರೆ ಹಾಗೂ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ರೈತ ಮುಖಂಡರು ಸಭೆಯಲ್ಲಿ ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿ ಮಾತನಾಡಿದ ಜಿಲ್ಲಾಧಿಕಾರಿ, ಶ್ರೀರಾಮ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒಪ್ಪಂದ ಆಗಿದೆ. ಈ ವರ್ಷ ಕಾರ್ಖಾನೆ ಶುರುವಾಗಲಿದೆ. ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆ ನಡೆಯುತ್ತಿದ್ದು, ಅಲ್ಲಿನ ಸಮಸ್ಯೆಗಳ ಬಗ್ಗೆ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡುವುದು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕಳಪೆ ಬಿತ್ತನೆ ಬೀಜ ವಿತರಣೆ ಕಂಡುಬಂದರೆ ರೈತರು ತಕ್ಷಣ ಗಮನಕ್ಕೆ ತಂದರೆ ಶೀಘ್ರವಾಗಿ ಅಧಿಕಾರಿಗಳ ಮೂಲಕ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರತಿ ಮನೆಗೂ ನೀರು ಎಂಬುದು ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯವು 2019ರಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಪ್ರಾರಂಭಿಸಿದ ಯೋಜನೆಯಾಗಿದ್ದು, 2024ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಪ್ರತಿದಿನ ನಿಯಮಿತವಾಗಿ ಟ್ಯಾಪ್ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ. ಆದರೆ, ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಸಮರ್ಪಕ ರೀತಿಯಲ್ಲಿ ಆಗುತ್ತಿಲ್ಲ ಎಂಬ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಡೆಯುತ್ತಿರುವ ಬಗ್ಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

ಕೆರೆಗಳ ಒತ್ತುವರಿ ತೆರವು, ಕೆರೆಗಳ ಹೂಳೆತ್ತುವುದು, ಫಸಲ್ ಭೀಮ ಯೋಜನೆಯಡಿ ತೋಟಗಾರಿಕೆ ಇಲಾಖೆ ಬೆಳೆಗಳಿಗೆ ವಿಸ್ತರಣೆ, ಸಮರ್ಪಕವಾಗಿ ಮಣ್ಣಿನ ಫಲವತ್ತತೆ ಪರೀಕ್ಷೆ ಮಾಡಬೇಕು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆಗಳ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡುವ ಈ ಎಲ್ಲ ಕುರಿತು ಅಗತ್ಯ ಕ್ರಮ ವಹಿಸುವಂತೆ ರೈತ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.

ರಸ್ತೆ ಬದಿಯಲ್ಲಿ ನಡೆಯುವ ಗಿಡಗಳನ್ನು ನೆಟ್ಟು ಅದರ ನಿರ್ವಹಣೆ ಮಾಡಲಾಗುತ್ತಿದೆ. ವೈಜ್ಞಾನಿಕವಾಗಿ ಸಸಿ ನೆಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜು ಸಭೆಯಲ್ಲಿ ಮಾಹಿತಿ ನೀಡಿದರು.

ಕೃಷಿ ಚಟುವಟಿಕೆಗಳ ವೆಚ್ಚಕ್ಕೆ ಬ್ಯಾಂಕ್‌ಗಳಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆದು ಬೇಸಾಯ ಮಾಡುತ್ತಾರೆ. ಈ ಸಂಬಂಧ ಬಡ್ಡಿ ಪಾವತಿ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮಾತನಾಡಿ, ಆರ್.ಬಿ.ಐ. ಮಾರ್ಗಸೂಚಿ ಪ್ರಕಾರ ಬ್ಯಾಂಕ್‌ಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು ಈ ಬಗ್ಗೆ ರೈತರಿಗೆ ಸಂಪೂರ್ಣವಾದ ಮಾಹಿತಿ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಂರಾಜು, ಜಂಟಿ ಕೃಷಿ ನಿರ್ದೇಶಕ ರವಿ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net