

ಅರಕಲಗೂಡು: ಕೃಷಿಗೆ ಹೆಚ್ಚಿನ ಉತ್ತೇಜನ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಅನೇಕ ರೀತಿಯಲ್ಲಿ ಉಪಕಾರಿಯಾಗುವ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿ ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಎಚ್.ಯೋಗಾರಮೇಶ್ ಹೇಳಿದರು.
ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ರೈತರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ವಿತರಿಸಿ ಮಾತನಾಡಿ, 8 ವರ್ಷದ ಆಡಳಿತಾವಧಿಯಲ್ಲಿ ನರೇಂದ್ರ ಮೋದಿ ಅವರು ರೈತರು, ದೇಶದ ಅಭಿವೃದ್ಧಿ, ಗಡಿ ರಕ್ಷಣೆ, ಭಾರತೀಯ ಸೇನೆ ಬಲಪಡಿಸುವುದು, ಆಯುಷ್ಮಾನ್ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ ಮತ್ತಿತರ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು 2024ರಲ್ಲಿ ನಡೆಯುವ ಚುನಾವಣೆಯಲ್ಲೂ ಗೆದ್ದು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಕೃಷಿ ಕ್ಷೇತ್ರದ ಏಳಿಗೆಗೆ ಇನ್ನಷ್ಟು ಶ್ರಮಿಸಲಿದ್ದಾರೆ ಎಂದು ತಿಳಿಸಿದರು.
ಹೊನ್ನವಳ್ಳಿ ಬೂತ್ ಕಾರ್ಯಕರ್ತರು ರೈತರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ನೀಡಬೇಕೆಂದು ಕಾರ್ಯಕ್ರಮ ಆಯೋಜಿಸಿ ವಿತರಿಸಲಾಗಿದೆ. ರೈತರು ಇವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಂಡೇಶ್ವರ್, ಮಂಡಲ ಪ್ರಧಾನ ಕಾರ್ಯದರ್ಶಿ ಲೋಕೇಶ್, ವಕೀಲ ಬಿ.ಸಿ. ರಾಜೇಶ್ ಇತರರು ಇದ್ದರು.