

ಅರಸೀಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತರಿಗೆ ದೊರೆಯುವ ಸವಲತ್ತುಗಳನ್ನು ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಹುಲ್ಲಳ್ಳಿ ಸುರೇಶ್ ಹೇಳಿದರು.
ತಾಲೂಕಿನ ಜಾವಗಲ್ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಇತ್ತೀಚೆಗೆ ಬಿತ್ತನೆ ಬೀಜ ಹಾಗೂ ಟಾರ್ಪಾಲ್ ವಿತರಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರುಣ ಸಕಾಲಕ್ಕೆ ಕೃಪೆ ತೋರಿದಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಳ್ಳುವ ಸಾಧ್ಯತೆಗಳಿದ್ದು, ರೈತರಿಗೆ ತೊಂದರೆಯಾಗದಂತೆ ಬಿತ್ತನೆ ಬೀಜ ನೀಡಲಾಗುತ್ತಿದೆ. ಜತೆಗೆ ಟಾರ್ಪಾಲ್ ವಿತರಿಸಲಾಗುತ್ತಿದ್ದು, ಫಲಾನುಭವಿಗಳ ಆಯ್ಕೆ ವಿಷಯದಲ್ಲಿ ಲೋಪವಾಗಬಾರದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎ.ಪಿ.ಶಿವಕುಮಾರ್, ಕೃಷಿ ಅಧಿಕಾರಿ ಸುಬ್ರಮಣ್ಯ, ಜಿಪಂ ಎಇ ಉಮೇಶ್, ನೇರ‌್ಲಿಗೆ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಸಣ್ಣನಿರಾವರಿ ಎಇ ರವೀಶ್, ಜೆಜೆಎಂ ಎಇ ರಾಕೇಶ್ ಇತರರು ಇದ್ದರು.