ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಜಿಲ್ಲಾಧಿಕಾರಿ ಸಿ. ಸತ್ಯಭಾಮಾ

27_HSN_08
Published on

ಹಾಸನ: ರೈತಾಪಿ ವರ್ಗದವರು ಮಾಡಿರುವ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ಆತ್ಮಹತ್ಯೆ ದಾರಿ ಹಿಡಿಯದೆ ಧೈರ್ಯವಾಗಿ ಎದುರಿಸಲು ಆತ್ಮಸ್ಥೈರ್ಯ ತುಂಬುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಸಾಲ ತೀರಿಸಲು ಬ್ಯಾಂಕ್‌ಗಳಲ್ಲಿ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡು ಧೈರ್ಯದಿಂದ ಮುಂದಿನ ದಿನಗಳಲ್ಲಿ ಸಾಲ ತೀರುವವರೆಗೆ ಗಮನಹರಿಸಿ ಎಂದು ರೈತರಿಗೆ ಮನವರಿಕೆ ಮಾಡಿಕೊಡಿ ಎಂದು ತಿಳಿಸಿದರು.

ಆಕಸ್ಮಿಕವಾಗಿ ಬೆಂಕಿ ಅವಘಡಗಳು ಸಂಭವಿಸಿದರೆ ತಕ್ಷಣ ನಂದಿಸಲು ಅಗ್ನಿಶಾಮಕ ದಳ ಎಚ್ಚರವಹಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ವ್ಯಾಪ್ತಿಯಲ್ಲಿ ಭೂ ಕುಸಿತ ತಡೆಗಟ್ಟಲು ಈಗಾಗಲೇ ತಡೆಗೋಡೆ ನಿರ್ಮಾಣಕ್ಕೆ ಪ್ರಾರಂಭಿಸಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸಕಲೇಶಪುರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೇಸಿಗೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ತೊಟ್ಟಿಗಳಲ್ಲಿ ಪ್ರಾಣಿ- ಪಕ್ಷಿಗಳಿಗೆ ನೀರು ಲಭ್ಯವಿರುವಂತೆ ನೋಡಿಕೊಳ್ಳಲು ತಿಳಿಸಿದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ತೊಂದರೆ ಇಲ್ಲ ಎಂದು ತಿಳಿಸಿದ ಅವರು ಸಮಸ್ಯೆ ಕಂಡು ಬಂದಲ್ಲಿ ಸ್ಥಳೀಯ ಸಂಸ್ಥೆಗಳು ತಕ್ಷಣ ನಿಗಾ ವಹಿಸಲು ಸೂಚನೆ ನೀಡಿದರು.

ಜನರಿಗೆ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ತಕ್ಷಣ ವೈದ್ಯರು ಸ್ಪಂದಿಸಿ ಚಿಕಿತ್ಸೆ ನೀಡಲು ಸೂಚನೆ ನೀಡಿದರಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ವೈದ್ಯರು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ರಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net