ರೋಣ ಪುರಸಭೆಗೆ ವಿದ್ಯಾ ದೊಡ್ಡಮನಿ ಅಧ್ಯಕ್ಷೆ

6 RON 1
Published on

ರೋಣ: ಇಲ್ಲಿನ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿದ್ಯಾ ದೊಡ್ಡಮನಿ ಹಾಗೂ ಉಪಾಧ್ಯಕ್ಷರಾಗಿ ಸಂಗನಗೌಡ ಗುರುಪಾದಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.

ಪುರಸಭೆ ಸಭಾಂಗಣದಲ್ಲಿ ಬೆಳಗ್ಗೆ 10 ಕ್ಕೆ ಚುನಾವಣೆ ಪ್ರಕಿಯೆ ಆರಂಭವಾಯಿತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯೂ ಆಗಿರುವ ತಹಸೀಲ್ದಾರ್ ಜೆ.ಬಿ. ಜಕ್ಕನಗೌಡ್ರ ಇವರಿಬ್ಬರ ಅವಿರೋಧ ಆಯ್ಕೆ ಘೊಷಿಸಿದರು.

ಪುರಸಭೆಯಲ್ಲಿ ಒಟ್ಟು 23 ಸದಸ್ಯ ಬಲವಿದ್ದು, ಅದರಲ್ಲಿ 16 ಕಾಂಗ್ರೆಸ್ ಪಕ್ಷದ ಸದಸ್ಯರಿದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ 7 ಜನ ಬಿಜೆಪಿ ಸದಸ್ಯರು ಗೈರು ಹಾಜರಾಗಿದ್ದರು.

ಅಭಿವೃದ್ಧಿಗೆ ಆದ್ಯತೆ: ಚುನಾವಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಾಧ್ಯಕ್ಷ ಸಂಗನಗೌಡ ಗುರುಪಾದಗೌಡ ಪಾಟೀಲ, ಒಂದೂವರೆ ವರ್ಷದಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಹಾಗಾಗಿ ಪುರಸಭೆಯಲ್ಲಿ ಮೂಲಸೌಕರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರ ಕೆಲಸಗಳನ್ನು ವೇಗವಾಗಿ ಮಾಡಿಕೊಡಲು ಕಾಳಜಿ ವಹಿಸಲಾಗುವುದು ಎಂದರು.

‘ನಮ್ಮ ತಂದೆ ಮಾಜಿ ಶಾಸಕ ಜಿ.ಎಸ್. ಪಾಟೀಲರು ಕಳೆದ ಮೂವತ್ತೈದು ವರ್ಷಗಳಿಂದ ರೋಣ ಪುರಸಭೆಯಲ್ಲಿ ತಮ್ಮ ಹಿಡಿತವನ್ನು ಬಿಟ್ಟುಕೊಟ್ಟಿಲ್ಲ. ಅವರ ಮಾರ್ಗದರ್ಶನದಲ್ಲಿ ಮುಂಬರುವ ದಿನಗಳಲ್ಲಿ ಪುರಸಭೆಯನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸುವ ಗುರಿ ಹೊಂದಿದ್ದೇನೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ. ಎಲ್ಲರಿಂದ ಸಹಕಾರ ಸಿಗುವ ನಿರೀಕ್ಷೆಯಿದೆ. ಪಟ್ಟಣದ ಅಭಿವೃದ್ಧಿಗಾಗಿ ಎಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

ಇದೇ ವೇಳೆ ನೂತನ ಅಧ್ಯಕ್ಷೆ-ಉಪಾಧ್ಯಕ್ಷರಿಗೆ ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ, ಮಾಜಿ ಶಾಸಕ ಜಿ.ಎಸ್. ಪಾಟೀಲ ಹಾರ ಹಾಕಿ ಸನ್ಮಾನಿಸಿದರು. ‘ಅಧಿಕಾರ ಶಾಶ್ವತವಲ್ಲ, ಅಧಿಕಾರದಲ್ಲಿರುವಷ್ಟು ದಿನ ಜನ ಸೇವೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ನೀವು ಮಾಡಿರುವ ಅಭಿವೃದ್ಧಿ ಕೆಲಗಳು ಜನರ ಮಾತಾಗಬೇಕು. ಪಕ್ಷಭೇದ ಮರೆತು ಎಲ್ಲ ಸದಸ್ಯರನ್ನು ಗಣನೆಗೆ ತಗೆದುಕೊಂಡು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧರಾಗಿರಬೇಕು’ ಎಂದು ನೂತನ ಅಧ್ಯಕ್ಷೆ-ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಕಿವಿಮಾತು ಹೇಳಿದರು. ರೋಣ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವೀರಣ್ಣಾ ಶೆಟ್ಟರ್, ಪಿಎಲ್​ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಸವರಾಜ ನವಲಗುಂದ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net