ರೋಗಿಗಳಿಗೆ ಸಮರ್ಪಕ ಸೇವೆ ಸಿಗಲಿ

DHO Visit
ಹನೂರು ತಾಲೂಕಿನ ರಾಮಾಪುರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎಂ.ಆರ್.ಮಂಜುನಾಥ್ ರೋಗಿಗಳಿಂದ ಮಾಹಿತಿ ಪಡೆದರು. ಡಿಎಚ್‌ಒ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಟಿಎಚ್‌ಒ ಡಾ.ಪ್ರಕಾಶ್, ಡಾ.ಪ್ರವೀಣ್, ಡಾ.ರಾಜು ಮತ್ತಿತರರು ಇದ್ದರು.
Published on

ಹನೂರು : ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.

ತಾಲೂಕಿನ ರಾಮಾಪುರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಅವರಿಂದ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಹನೂರು ಭಾಗವು ಅದರಲ್ಲೂ ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿದೆ. ಇಲ್ಲಿನ ಜನರಿಗೆ ಸಮರ್ಪಕ ಆರೋಗ್ಯ ಸೇವೆ ಸಿಗುತ್ತಿಲ್ಲ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಬೇಕು. ಜತೆಗೆ ತಾಲೂಕಿನಲ್ಲಿಯೇ ಇದೀಗ ಈ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ತೆರೆಯಲಾಗಿದೆ. ಇದರಿಂದ ಇದುವರೆಗೂ ಚಿಕಿತ್ಸೆಗಾಗಿ ಕೊಳ್ಳೇಗಾಲ, ಚಾಮರಾಜನಗರ ಹಾಗೂ ಮೈಸೂರಿಗೆ ತೆರಳುತ್ತಿದ್ದ ರೋಗಿಗಳು ಈ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ, ಸಕಾಲಕ್ಕೆ ಅಗತ್ಯ ಚಿಕಿತ್ಸೆ ನೀಡಬೇಕು. ಯಾವುದೇ ನಿರ್ಲಕ್ಷ್ಯ ಸಲ್ಲದು. ಒಂದು ವೇಳೆ ಸಮಸ್ಯೆಯಾದಲ್ಲಿ ನನ್ನ ಗಮನಕ್ಕೆ ತನ್ನಿ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಳೆಯ ಕಟ್ಟಡದಲ್ಲಿ ತಂಗುತ್ತಿರುವುದು ಗಮನಕ್ಕೆ ಬಂದಿದೆ. ಈ ದಿಸೆಯಲ್ಲಿ ಸರ್ಕಾರದ ಗಮನಕ್ಕೆ ತಂದು ವಸತಿ ಗೃಹಗಳನ್ನು ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದೇ ವೇಳೆ ರೋಗಿಗಳಿಂದ ಆಸ್ಪತ್ರೆಯಲ್ಲಿ ಸಿಗುತ್ತಿರುವ ವ್ಯವಸ್ಥೆಯ ಬಗ್ಗೆ ಶಾಸಕರು ಮಾಹಿತಿ ಪಡೆದುಕೊಂಡರು. ಬಳಿಕ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಅಗತ್ಯ ಮೂಲಸೌಕರ್ಯವನ್ನು ಒದಗಿಸುವುದಾಗಿ ಭರವಸೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ವೈದ್ಯರಾದ ಡಾ.ಪ್ರವೀಣ್, ಡಾ.ರಾಜು, ಪಿಡಿಒ ಮಹದೇವಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net