

ಚನ್ನರಾಯಪಟ್ಟಣ: ಸರ್ಕಾರಿ ಶಾಲೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣದ ಜತೆಗೆ ಅಗತ್ಯ ವಸ್ತುಗಳನ್ನು ಒದಗಿಸಿದಾಗ ಪರಿಪೂರ್ಣ ವಿದ್ಯಾರ್ಥಿಯಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿಷನ್ ಅಧ್ಯಕ್ಷ ಎ.ಸಿ. ಜಯರಾಘವೇಂದ್ರ ಅಭಿಪ್ರಾಯಪಟ್ಟರು.
ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಕುಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿಷನ್ ವತಿಯಿಂದ ಮಕ್ಕಳಿಗೆ ಶಾಲಾ ಬ್ಯಾಗ್, ಹಾಗೂ ವಾಟರ್‌ಬಾಟಲ್‌ಗಳನ್ನು ವಿತರಿಸಿ ಮಾತನಾಡಿದ ಅವರು, ರೋಟರಿ ಕ್ಲಬ್ ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗುವಂತೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಸಮಾಜಮುಖಿ ಕಾರ್ಯಗಳಿಂದ ಚನ್ನರಾಯಪಟ್ಟಣದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದರು.
ರೋಟರಿ ಸಹಾಯಕ ಪ್ರಾಂತ್ಯಪಾಲ ಪದ್ಮನಾಭ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಕಲ್ಪಿಸುವ ಕೆಲಸ ಆಗಬೇಕು. ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ಗುರುತಿಸಿ ನೆರವು ನೀಡಿದಾಗ ಶಾಲೆಗಳ ಅಭಿವೃದ್ಧಿ ಆಗುತ್ತದೆ. ರೋಟರಿ ಸಂಸ್ಥೆಯು ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಿ, ಆ ಮೂಲಕ ಮಕ್ಕಳ ಮನೋಬಲ ವೃದ್ಧಿಸುವ ಕಾರ್ಯವನ್ನು ಸುಮಾರು ವರ್ಷಗಳಿಂದ ಮಾಡುತ್ತಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಎಚ್.ಇ.ಪದ್ಮಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಧರ್ಮಣ್ಣ, ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿಷನ್ ಕಾರ್ಯದರ್ಶಿ ಎಚ್.ಎನ್.ಶಿವನಂಜೇಗೌಡ, ವಲಯ ಸೇನಾನಿ ಸಿ.ಎಸ್.ಕಿಶೋರ್ ಕುಮಾರ್, ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.