ಲಭ್ಯವಿರುವ ಅನುದಾನ ಬಳಸಿಕೊಳ್ಳಿ

09 SARAG 1
Published on

ಸರಗೂರು: ಆರೋಗ್ಯ ಕೇಂದ್ರಗಳ ಖಾತೆಗೆ 2025-26ನೇ ಸಾಲಿನ ಅನುದಾನವನ್ನು ಬಿಡುಗಡೆ ಮಾಡುವ ಹಿನ್ನೆಲೆಯಲ್ಲಿ ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿಕೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಸಮಿತಿಗಳಿಗೆ ಸೂಚಿಸಿದರು.

ತುಂಬಸೋಗೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಚುನಾಯಿತ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಆರೋಗ್ಯ ಕುರಿತು ಚರ್ಚಿಸುವುದು ಹಾಗೂ 2025-26ನೇ ಸಾಲಿಗೆ ಸಂಬಂಧಿಸಿದಂತೆ ಗ್ರಾಮಗಳ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಿ ತಯಾರಿಸುವುದು, ಜು.11ರಂದು ವಿಶ್ವ ಜನಸಂಖ್ಯೆ ದಿನವನ್ನು ಕಡ್ಡಾಯವಾಗಿ ಆಚರಿಸುವಂತೆ ತಿಳಿಸಿದರು.

ವಿಶ್ವಾಸ್ ಆಂದೋಲನದ ವ್ಯಾಪ್ತಿಯಲ್ಲಿ ಕೈ ತೊಳೆಯುವ ವಿಧಾನ ಮತ್ತು ಮಹತ್ವದ ಕುರಿತು ಸಭೆಗಳಲ್ಲಿ ಅರಿವು ಮೂಡಿಸುವುದು ಹಾಗೂ ಕಲ್ಪಿತ ಪ್ರದರ್ಶನ ಕೈಗೊಳ್ಳುವಂತೆ ತಿಳಿಸಿದರು.

2025-26ರ ಆರ್ಥಿಕ ವರ್ಷದಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯ ಮಟ್ಟದಲ್ಲಿ ಅನುಷ್ಠಾನ ಮಾಡುವುದು, ಕುಷ್ಠರೋಗ ಪತ್ತೆ ಹಚ್ಚುವಿಕೆ ಮತ್ತು ನಿರ್ಮೂಲನೆಗೆ ಕಾರ್ಯಕ್ರಮದ ರೂಪುರೇಷೆ ಕುರಿತ ಚರ್ಚಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಸಮುದಾಯ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳು, ಡೆಂೆ, ಮಲೇರಿಯಾ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರು.

ಗರ್ಭಿಣಿ ಮತ್ತು ಬಾಣಂತಿಯರಿಗೆ ಅನೀಮಿಯಾ ಮತ್ತು ಪೌಷ್ಟಿಕ ಆಹಾರ ಬಗ್ಗೆ ಮಾಹಿತಿ ನೀಡಿದ ಅವರು, ಬಾಲ್ಯ ವಿವಾಹ ನಿಷೇಧ, ಭ್ರೂಣ ಹತ್ಯೆ, ಪೋಕ್ಸೊ ಕಾಯ್ದೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಅಂಧತ್ವ ನಿವಾರಣಾ ಕಾರ್ಯಕ್ರಮದಡಿಯಲ್ಲಿ ಹಿರಿಯ ನಾಗರಿಕರಿಗೆ, 40 ವರ್ಷ ಮೇಲ್ಪಟ್ಟವರಿಗೆ ಉಚಿತ ಕನ್ನಡಕ ವಿತರಿಸಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಪಡೆದುಕೊಳ್ಳಿ ಎಂದು ತಿಳಿಸಿದರು. ಫ್ಲೋರೋಸಿಸ್ ಕಾರ್ಯಕ್ರಮದಡಿ ಕುಡಿಯುವ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ ಎಂದರು.

ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುರ, ಗ್ರಾಮ ಪಂಚಾಯಿತಿ ಸದಸ್ಯ ಚೆನ್ನನಾಯ್ಕ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ನಾಗೇಂದ್ರ, ಅರ್ಚನಾ, ಪುಷ್ಪಾ, ರೇಖಾ ರವಿರಾಜ್, ಸಮುದಾಯ ಆರೋಗ್ಯ ಅಧಿಕಾರಿ ಮಾನಸಾ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net