ಲಾಕ್‌ಡೌನ್‌ನಿಂದ ಸೋಂಕು ಇಳಿಕೆ, ಸಂಸದ ಬಚ್ಚೇಗೌಡ ಅಭಿಮತ, ಜಿಲ್ಲಾಡಳಿತಕ್ಕೆ ಕೋವಿಡ್ ಪರಿಕರ ಹಸ್ತಾಂತರ

mp
Published on

ಬೆಂಗಳೂರು ಗ್ರಾಮಾಂತರ: ರಾಜ್ಯಾದ್ಯಂತ ಲಾಕ್‌ಡೌನ್ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಪರಿಣಾಮ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಸಂಸದ ಬಿ.ಎನ್. ಬಚ್ಚೇಗೌಡ ಹೇಳಿದರು.

ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿ ಬುಧವಾರ ಕೋವಿಡ್ ಪರಿಕರಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದರು. ಕೋವಿಡ್ ಸೋಂಕಿನ ಪ್ರಮಾಣ ಇಳಿಕೆ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್ ಹಾಗೂ ಲಸಿಕೆ ಸಮಸ್ಯೆ ಇಲ್ಲ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕರೊನಾ ವಾರಿಯರ್ಸ್ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಮಾಧ್ಯಮಗಳು ಸಹ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1,075 ಕಂದಾಯ ಗ್ರಾಮಗಳಿದ್ದು, ಸೋಂಕಿತರಲ್ಲಿ ಹೆಚ್ಚಿನ ಜನರು ಹೋಮ್ ಐಸೋಲೇಷನ್‌ನಲ್ಲಿದ್ದರು. ಅವರನ್ನು ವಿಲೇಜ್ ಟಾಸ್‌‌ಟೆೆರ್ಸ್ ಮೂಲಕ ಮನವೊಲಿಸಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ ಅವರ ಆರೋಗ್ಯ ಸುಧಾರಿಸುವ ಕೆಲಸವಾಗುತ್ತಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಅಧಿಕಾರಿಗಳೊಂದಿಗೆ ಚರ್ಚಿಸಿ, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ 20, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ 10, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ 10 ಹಾಗೂ ಹೊಸಕೋಟೆ ಆಸ್ಪತ್ರೆಗೆ 5 ಒಟ್ಟು ಜಿಲ್ಲೆಗೆ 45 ಆಕ್ಸಿಜನ್ ಕಾನ್ಸನ್ ಟ್ರೇಟರ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಡಳಿತದಿಂದ ಇದುವರೆಗೂ 20 ಸಾವಿರ ಮೆಡಿಕಲ್ ಕಿಟ್ ವಿತರಣೆ ಮಾಡಲಾಗಿದೆ. ಪ್ರತೀ ತಾಲೂಕಿನಲ್ಲಿ 6 ರಂತೆ ಒಟ್ಟು 24 ಆಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಕೋವಿಡ್ ಮೂರನೇ ಅಲೆ ತಡೆಯಲು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ 50 ಹಾಸಿಗೆಯ ಸಾಮರ್ಥ್ಯವುಳ್ಳ 4 ಕೋವಿಡ್ ಕೇರ್ ಸೆಂಟರ್‌ಗಳು ಹಾಗೂ ಅಂಗವಿಕಲ ಮಕ್ಕಳಿಗೆ ಪ್ರತ್ಯೇಕ ಎರಡು ಕೇರ್ ಸೆಂಟರ್ ತೆರೆಯಲಾಗಿದೆ ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಈಗಾಗಲೇ ವೈದ್ಯರು ತಿಳಿಸಿದ ಹಿನ್ನೆಲೆ, 1 ರಿಂದ 6 ವರ್ಷ ಹಾಗೂ 6 ರಿಂದ 18 ವರ್ಷದ ಮಕ್ಕಳನ್ನು ಪ್ರತ್ಯೇಕವಾಗಿ ಆರೈಕೆ ಮಾಡುವಂತೆ ಸೂಚಿಸಲಾಗಿದ್ದು, ಅದರಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಮಕ್ಕಳಲ್ಲಿ ಕೋವಿಡ್ ಹರಡುವಿಕೆ ತಡೆಯಲು ಎಲ್ಲರೂ ಮುಂದಾಗಬೇಕು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮಾತನಾಡಿ, ಸಂಸದರು 2 ಸಾವಿರ ಕೋವಿಡ್ ಮೆಡಿಕಲ್ ಕಿಟ್ ಹಾಗೂ 2 ಸಾವಿರ ಮಾಸ್ಟ್‌ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net