

ಹಾಸನ: ಹೆಣ್ಣಿನ ಮೇಲೆ ನಡೆಯುವ ದೌರ್ಜನ, ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆಯನ್ನು ಪೂರ್ಣ ಪ್ರಮಾಣದಲ್ಲಿ ತಡೆಗಟ್ಟುವ ಮೂಲಕ ಹೆಣ್ಣು ಮಕ್ಕಳ ಸಂರಕ್ಷಣೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾರ್ವಜಿನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಹಾಸನಾಂಬ ಕಲಾಭವನದಲ್ಲಿ ಶುಕ್ರವಾರ ಭೇಟಿ ಬಚಾವೋ ಭೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರ ಮೇಲಾಗುವ ಹಿಂಸಾಚಾರ ತಡೆಯಲು ಮಾನವ ಹಕ್ಕುಗಳು ಸಹಕಾರಿಯಾಗಿದೆ ಎಂದರು.
ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸಲು ತೆಗೆದುಕೊಳ್ಳುವ ನಿರ್ಧಾರ ಪ್ರಕ್ರಿಯೆಗಳು ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಮುಖ್ಯವಾಗಿದೆ. ಪೋಷಕರು, ಕಾನೂನು ಪಾಲಕರು, ಕುಟುಂಬಗಳು ಮತ್ತು ಆರೈಕೆ ಪೂರೈಕೆದಾರರು ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುವ ಎಲ್ಲ ತಾರತಮ್ಯವನ್ನು ದೂರ ಮಾಡುತ್ತವೆ ಎಂದು ಅವರು ತಿಳಿಸಿದರು.
ಹೆಣ್ಣು ಮಗು ಬೇಡ ಎಂದು ತಿರಸ್ಕರಿಸುವುದು, ರಕ್ಷಣೆ ಮಾಡದೇ ಇರುವುದು ದೇಶಕ್ಕೆ ಮಾಡುವ ದ್ರೋಹ, ಹೆಣ್ಣು ಮಕ್ಕಳ ರಕ್ಷಣೆಗೆ ಸಾಕಷ್ಟು ಯೋಜನೆಗಳನ್ನು ಸರ್ಕಾರ ಮಾಡಿದೆ. ಈ ಕಾನೂನುಗಳನ್ನು ಬಳಿಸಿಕೊಂಡು ಹೆಣ್ಣು ಮಕ್ಕಳನ್ನು ದೇಶದ ಹೆಮ್ಮೆಯ ವ್ಯಕ್ತಿಯಾಗಿ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆ ಎಂದರೇ ಅಡುಗೆ ಮನೆಯಿಂದ ಹಿಡಿದು ಎಲ್ಲಾ ಕ್ಷೇತ್ರದಲ್ಲೂ ಕಾಲಿಟ್ಟಿದ್ದು, ಮೊದಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದರ ಮೂಲಕ ಶಕ್ತಿ ತುಂಬಬೇಕು. ಮನೆಯಲ್ಲಿ ಹೆಣ್ಣು ಮಗು ಜನಿಸಿದರೇ ದುಃಖ ಪಡದೇ ಸಿಹಿ ಹಂಚಿ ಸಂಭ್ರಮಿಸಬೇಕು ಎಂದು ಹೆಳಿದರು.
ಹೆಣ್ಣು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಸಮಾಜದಲ್ಲಿ ಹೆಣ್ಣು ಮಗುವಿಗೆ ದೊರೆಯಬೇಕಿರುವ ಗೌರವ ಮತ್ತು ಮೌಲ್ಯವನ್ನು ತಿಳಿಸಬೇಕು ಮನೆಯಲ್ಲಿ ತಾಯಿಂದಿರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ದೇಶದಲ್ಲಿ ಇತರೆ ಹೆಣ್ಣು ಮಗುವಿಗೂ ಎಲ್ಲ ಮೂಲಭೂತ ಹಕ್ಕುಗಳು ದೊರೆಯುಂತೆ ನೋಡಿಕೊಳ್ಳಬೇಕು ಎಂದರು.
ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು. ಭಾರತೀಯ ಜನರಲ್ಲಿ ಲಿಂಗಸಮಾನತೆಯ ಜಾಗೃತಿ ಉಂಟು ಮಾಡುವುದು ಎಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರಸವಪೂರ್ವ ಲಿಂಗಪತ್ತೆ ನಿಷೇಧ, ಹೆಣ್ಣು ಮಕ್ಕಳ ಬಾಲ್ಯ ವಿವಾಹ ಪದ್ಧತಿಗೆ ನಿಬರ್ಂಧ, ಹೆಣ್ಣು ಭ್ರೂಣ ಪತ್ತೆ, ದೌರ್ಜನ್ಯ, ಹೆಣ್ಣು ಮಕ್ಕಳ ವಿರುದ್ಧ ನಡೆಯುವ ಶೋಷಣೆ, ಲೈಗಿಂಕ ಕಿರುಕುಳ ಅಂತಹ ಕೃತ್ಯಗಳನ್ನು ತಡೆಗಟ್ಟಬೇಕು. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿರುವ ವಿಚಾರದ ಕುರಿತಾಗಿ ಜಾಗೃತಿ ಮೂಡಿಸಬೇಕು ಅಸಮಾನತೆ ಮತ್ತು ಲಿಂಗತಾರತಮ್ಯದಂತಹ ಸಾಮಾಜಿಕ ಸಮಸ್ಯೆಗಳನ್ನು ನಿವಾರ್ಹಣೆಯಾಗಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಅವರು ಮಾತನಾಡಿ, ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಸಂವಿಧಾನದಲ್ಲಿ ಅನುಚ್ಛೇದ 14 ರಲ್ಲಿ ಸಮಾನತೆ ಹಕ್ಕಿನ ಅನ್ವಯ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಂತೆ ಸಮಾನತೆ ನೀಡಬೇಕು, ಆಸ್ತಿ ಹಕ್ಕು, ವಿದ್ಯಾಭ್ಯಾಸ ಹಕ್ಕು, ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಕಾನೂನು ಮಹಿಳೆಯರಿಗೆ ಇದೆ. ವರದಕ್ಷಿಣೆ ಕಿರುಕುಳ, ಭೇದಭಾವ ಮತ್ತು ಬಾಲ್ಯವಿವಾಹದ ಅಂತಹ ಹಲವಾರು ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದರ ಮೂಲಕ ಸಾಮಾಜಿಕ ಪಿಡುಗು ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಟಿ. ಪ್ರಸನ್ನ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್‌ಫೀರ್, ಸಾಹಿತಿ ಬಿ.ಎಸ್. ವನಜಾಕ್ಷಿ ಮತ್ತಿತರರು ಇದ್ದರು.