

ಮದ್ದೂರು: ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಒಕ್ಕೂಟದ ಅಧ್ಯಕ್ಷ ಜಿ.ಎನ್. ಸತ್ಯ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಪಂ ಇಒ ಎಲ್. ಸಂದೀಪ್ ಅಧ್ಯಕ್ಷತೆಯಲ್ಲಿ ಸೋಮವಾರ ಆಯೋಜಿಸಿದ್ದ ಸಮನ್ವಯ ಸಮಿತಿ ಸಭೆ ಹಾಗೂ ಒಕ್ಕೂಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ತಾಲೂಕಿನ ಗ್ರಾಪಂ ವ್ಯಾಪ್ತಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ. ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಳವಡಿಸಿರುವ ಪೈಪ್‌ಲೈನ್ ಮತ್ತಿತರ ವಸ್ತುಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಹೀಗಾಗಿ ಯೋಜನೆ ಕುರಿತು ಸಂಪೂರ್ಣವಾಗಿ ತನಿಖೆ ನಡೆಸಬೇಕು ಎಂದು ಜಿ.ಎನ್. ಸತ್ಯ ಸಭೆಯಲ್ಲಿ ಒತ್ತಾಯಿಸಿದರು.
ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಗ್ರಾಪಂ ಸದಸ್ಯರ ಒಕ್ಕೂಟದ ವತಿಯಿಂದ ಲೋಕಾಯುಕ್ತಕ್ಕೆ ದೂರು ನೀಡಲು ತೀರ್ಮಾನಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.
ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಇದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಘಟಕಗಳ ನಿರ್ವಹಣೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲೋಪ ಉಂಟಾಗಿದೆ. ಇಂಜಿನಿಯರ್‌ಗಳು ಮತ್ತು ಏಜೆನ್ಸಿಗಳು ಸಮರ್ಪಕವಾಗಿ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಒಕ್ಕೂಟದ ಪದಾಧಿಕಾರಿ ಬ್ಯಾಡರಹಳ್ಳಿ ರಾಮಕೃಷ್ಣ ಗಂಭೀರ ಆರೋಪ ಮಾಡಿದರು.
ಬೇಸಿಗೆ ಸಮೀಪಿಸುತ್ತಿದೆ. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅಷ್ಟರಲ್ಲಿ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಿ ಜನರಿಗೆ ಕುಡಿಯುವ ನೀರು ಒದಗಿಸುವಂತೆ ರಾಮಕೃಷ್ಣ ಸಭೆಗೆ ಸಲಹೆ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ, ಸಕಾಲ ಯೋಜನೆ, ಉದ್ದಿಮೆಗಳ ಪರವಾನಗಿ ಮತ್ತು ಎನ್‌ಒಸಿ ಪತ್ರ ಸೇರಿದಂತೆ ಹಲವು ಯೋಜನೆಗಳ ಕೆಲಸ ಕಾರ್ಯಗಳನ್ನು ಪಿಡಿಒ ಹಾಗೂ ಕಾರ್ಯದರ್ಶಿಗಳು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿಲ್ಲ. ಕೆಲವು ಗ್ರಾಪಂಗಳಲ್ಲಿ ಗರಿಷ್ಠ 50 ಲಕ್ಷ ರೂ. ವರೆಗೆ ತೆರಿಗೆ ವಸೂಲಿ ಬಾಕಿ ಇದ್ದರೂ ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ವಸೂಲಾತಿಗೆ ಕ್ರಮ ಜರುಗಿಸುತ್ತಿಲ್ಲ. ಕೇವಲ ಕಾಟಾಚಾರಕ್ಕೆ ನೋಟಿಸ್ ನೀಡಿ ಕೆ ತೊಳೆದುಕೊಳ್ಳುತ್ತಿದ್ದಾರೆ. ಇದರಿಂದ ಗ್ರಾಪಂಗಳು ತೆರಿಗೆ ವಸೂಲಾತಿಯಲ್ಲಿ ಹಿನ್ನಡೆ ಅನುಭವಿಸುವ ಮೂಲಕ ಅಭಿವೃದ್ಧಿಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಒಕ್ಕೂಟದ ಪದಾಧಿಕಾರಿ ಮಾದರಹಳ್ಳಿ ಕೃಷ್ಣ ಆರೋಪಿಸಿದರು.
ತಾಲೂಕಿನ 42 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ಹಾಜರಾಗಿ ಸೂಕ್ತ ಮಾಹಿತಿ ನೀಡಬೇಕು. ಸರ್ಕಾರ ಕೈಗೊಂಡಿರುವ ಯೋಜನೆಗಳ ಕುರಿತು ಗ್ರಾಪಂ ಸದಸ್ಯರಿಗೆ ಮಾಹಿತಿ ನೀಡಬೇಕು ಎಂದು ಪದಾಧಿಕಾರಿ ಮಹೇಶ್ ಒತ್ತಾಯಿಸಿದರು.
ತಾಪಂ ಇಒ ಸಂದೀಪ್ ಮಾತನಾಡಿ, ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಸಭೆಯಲ್ಲಿದ್ದ ಪಿಡಿಒಗಳಿಗೆ ತಾಕೀತು ಮಾಡಿದರು.
ಸಭೆಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಜಿಪಂ ಇಂಜಿನಿಯರ್ ವಿಭಾಗದ ಎಇಇ ಕೋದಂಡರಾಮ, ಗ್ರಾಪಂ ಒಕ್ಕೂಟದ ಗೌರವಾಧ್ಯಕ್ಷ ದಯಾನಂದ, ಖಜಾಂಚಿ ನಂದೀಶ್‌ಗೌಡ, ಒಕ್ಕೂಟದ ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.