

ಚಿತ್ರದುರ್ಗ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿನ ಸರ್ಕಾರಿ ಆಸ್ತಿಗಳನ್ನು ಗುರುತಿಸಿ, ಹದ್ದುಬಸ್ತು ಮಾಡಿಕೊಳ್ಳಬೇಕು. ಲ್ಯಾಂಡ್ ಬೀಟ್ ದತ್ತಾಂಶದಲ್ಲಿ ಅಪ್‌ಲೋಡ್ ಕಾರ್ಯದಲ್ಲಿ ಶೇ. 95ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಭಾನುವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಪ್‌ಲೋಡ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ತ್ವರಿತವಾಗಿ ಗುರಿ ಸಾಧಿಸಲು ಅಧಿಕಾರಿಗಳು, ಸಿಬ್ಬಂದಿ ಸಮನ್ವಯತೆಯಿಂದ ಕೆಲಸ ಮಾಡಿ ಎಂದು ತಾಕೀತು ಮಾಡಿದರು.
ಸೆ. 27ರಂದು ಕಂದಾಯ ಸಚಿವರು ರಾಜ್ಯ ಮಟ್ಟದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಅಗತ್ಯ ಮಾಹಿತಿ ಕ್ರೋಢೀಕರಿಸಿ, ಸಲ್ಲಿಸಬೇಕಿದೆ. ಅದಕ್ಕಾಗಿ ವಿಪತ್ತು ನಿರ್ವಹಣೆ, ಆಧಾರ್ ಸೀಡಿಂಗ್, ಲ್ಯಾಂಡ್ ಬೀಟ್, ಇ-ಆಫೀಸ್, ಜನತಾದರ್ಶನ ಸಭೆಗಳಲ್ಲಿ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ, ಸಕಾಲ, ಪೋಡಿ ಪ್ರಕರಣಗಳ ಕುರಿತು ಪ್ರಗತಿ ಸಾಧಿಸಿದ ವರದಿ ಸಲ್ಲಿಸಿ ಎಂದು ಸೂಚಿಸಿದರು.
ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್, ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಇತರರಿದ್ದರು.