

ಪಾಂಡವಪುರ: ವಕೀಲರ ಮೇಲಿನ ಹಲ್ಲೆ ಹಾಗೂ ಬಂಧನ ಖಂಡಿಸಿ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ವಕೀಲರು ಕಲಾಪ ಬಹಿಷ್ಕರಿಸಿ ಗುರುವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಬಂಟ್ವಾಳದ ವಕೀಲ ಕುಲದೀಪ್‌ಸಿಂಗ್ ಅವರ ಬಂಧನದ ಹಿನ್ನೆಲೆಯಲ್ಲಿ ಸಭೆ ಸೇರಿದ ವಕೀಲರು ಕಲಾಪ ಬಹಿಷ್ಕಾರದ ತೀರ್ಮಾನ ಕೈಗೊಂಡು ಬಳಿಕ ನ್ಯಾಯಾಲಯದಿಂದ ತಾಲೂಕು ಕಚೇರಿವರೆಗೆ ಮೌನ ಮೆರವಣಿಗೆ ನಡೆಸಿ ವಕೀಲರ ಬಂಧನವನ್ನು ಖಂಡಿಸಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಕೆ.ಕಾಳೇಗೌಡ ಮಾತನಾಡಿ, ಮಂಗಳೂರಿನ ಬಂಟ್ವಾಳದ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಅಲ್ಲಿನ ವಕೀಲ ಕುಲದೀಪ್‌ಸಿಂಗ್ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ರಾತ್ರೋರಾತ್ರಿ ಬಂಧಿಸಿ ಅರೆಬೆತ್ತಲೆಯಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದು ನಾಗರೀಕ ಸಮಾಜ ತಲೆತಗ್ಗಿಸುವ ಕೆಲಸ. ವಕೀಲರ ತಾಯಿ, ಪತ್ನಿ ಬಂಧಿಸದಂತೆ ಅಂಗಲಾಚಿದರು ಅಮಾನವೀಯವಾಗಿ ನಡೆದುಕೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣ ವಜಾ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಕೀಲರ ಸಂಘದ ಕಾರ್ಯದರ್ಶಿ ಕೆ.ಎನ್.ನಾಗರಾಜು ಮಾತನಾಡಿ, ಇಡೀ ದೇಶದಾದ್ಯಂತ ವಕೀಲರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಕಾನೂನು ಪಾಲನೆ ಮತ್ತು ನ್ಯಾಯಕ್ಕಾಗಿ ಹೋರಾಡುವ ವಕೀಲರ ಮೇಲೆ ಈ ರೀತಿ ದಬ್ಬಾಳಿಕೆ, ದೌರ್ಜನ್ಯ ನಡೆದರೆ ಇತರ ಸಾಮಾನ್ಯ ಜನರಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆಗಳು ಹುಸಿಯಾಗುತ್ತದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ದೇಶದ ಕಾನೂನು ಎಲ್ಲರಿಗೂ ಒಂದೇ ಎನ್ನುವ ನಿಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ವಕೀಲರಾದ ಬಾಲು, ಎಲ್.ಸಿ.ಪ್ರಕಾಶ್, ಸುರೇಶ್, ಮೋಹನ್ ಇತರರು ಇದ್ದರು.