

ಚಾಮರಾಜನಗರ: ವಿವಿಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ವಕೀಲರ ಒಕ್ಕೂಟದ ಜಿಲ್ಲಾ ಸಮಿತಿ ಸದಸ್ಯರು ಶುಕ್ರವಾರ ನಗರದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ಜವರೇಗೌಡ ಅವರಿಗೆ ಒಕ್ಕೂಟದ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಪೊಲೀಸರ ಏಕ ಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು. ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಮಾರ್ಗಸೂಚಿ ಪಾಲಿಸಬೇಕು. ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಕಿರಿಯ ವಕೀಲರಿಗೆ 2 ವರ್ಷಗಳ ಕಾಲ ಮಾಸಿಕ 10 ಸಾವಿರ ರೂ. ಸಹಾಯಧನ ನೀಡಬೇಕು. ರಾಜ್ಯದ ಎಲ್ಲ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರೂ. ಅನುದಾನ ಮಂಜೂರು ಮಾಡಬೇಕು. ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರೂ. ಅನುದಾನ ನೀಡಬೇಕು. ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯ ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಹಾಗೆಯೇ ಈಗಿರುವ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ರೆವೆನ್ಯೂ ಎಸಿ, ಡಿಸಿ ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವುದರಿಂದ ಕಂದಾಯ ಪ್ರಕರಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿದರು.
ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು. ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು. ಈಗಿರುವ ಅನುದಾನಿತ ಮತ್ತು ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲಸೌಕರ್ಯ ಒದಗಿಸಬೇಕು. ರಾಜ್ಯ ವಕೀಲರ ಪರಿಷತ್ತಿನ ಕಚೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು. ವಕೀಲರ ಸಂಘ ಹಾಗೂ ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಅನುಸಾರ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ವಕೀಲರಾದ ಪ್ರಸನ್ನ ಕುಮಾರ್, ದೇವರಾಜು, ಆರ್.ಅಭಿಷೇಕ್, ಎಸ್.ಅಭಿಷೇಕ್, ಎಂ.ಆರ್.ಸವಿತಾ, ಶಶಿಕಲಾ, ಕಾವ್ಯಾ, ಸಿ.ಎನ್.ರವಿಕುಮಾರ್, ಮಹೇಂದ್ರ, ಶಶಿಕುಮಾರ್, ಸುದೀಪ್, ಗುಲ್ಜರ್ ಇತರರು ಇದ್ದರು.