ವಕ್ಫ್ ಗೆ ರಾಜ್ಯ ಸರ್ಕಾರ ಕುಮ್ಮಕ್ಕು

Published on

ಅರಕಲಗೂಡು: ವಕ್ಫ್ ಮಂಡಳಿಯ ಆಕ್ರಮಣಕಾರಿ ನೀತಿಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡದೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು ಎಂದು ಬಿಜೆಪಿ ಮುಖಂಡ ಲೋಕೇಶ್ ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ರಾಜ್ಯದಲ್ಲೂ ನಡೆಯುತ್ತಿರುವ ಇಂತಹ ಕೃತ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ. ಈ ರೀತಿಯ ಕೃತ್ಯಗಳನ್ನು ಮುಂದುವರಿಸಿದ್ದಲ್ಲಿ ರಾಜ್ಯದ ಜನತೆ ಒಗ್ಗೂಡಿಸಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ತಾಲೂಕು ಘಟಕದ ಮಾಜಿ ಅಧ್ಯಕ್ಷ ವಿಶ್ವನಾಥ್, ಮಂಡಲ ಮುಖಂಡ ಮಾದೇಶ್, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net