

ಧಾರವಾಡ: ಕೆಪಿಎಂಇ ಕಾಯ್ದೆಯಡಿ ನೋಂದಣಿ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳು ಪ್ರತಿದಿನ ತಮ್ಮಲ್ಲಿ ಚಿಕಿತ್ಸೆಗೆ ಬರುವ ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರ (ಐಎಲ್ಐ) ಲಕ್ಷಣಗಳಿರುವ ವ್ಯಕ್ತಿಗಳ ಹೆಸರು, ವಿಳಾಸ ಹಾಗೂ ಸಂಪರ್ಕ ಸಂಖ್ಯೆ ಮಾಹಿತಿಯನ್ನು ಕೆಪಿಎಂಇ ಪೋರ್ಟಲ್ನಲ್ಲಿ ಕಡ್ಡಾಯವಾಗಿ ಅಪ್ಡೇಟ್ ಮಾಡಬೇಕು. ಈ ಸೂಚನೆ ಪಾಲಿಸದ ಆಸ್ಪತ್ರೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 1,272ಕ್ಕೂ ಹೆಚ್ಚು ಕೆಪಿಎಂಇ ನೋಂದಾಯಿತ ಆಸ್ಪತ್ರೆಗಳಿವೆ. ಅವುಗಳಲ್ಲಿ ಕೆಲವು ಸಕ್ರಿಯವಾಗಿಲ್ಲ. ಕಾರ್ಯನಿರ್ವಹಿಸದಿರುವ ಆಸ್ಪತ್ರೆಗಳ ಕುರಿತು ಖುದ್ದು ಪರಿಶೀಲನೆ ಆಗಬೇಕು. ಖಾಸಗಿಯಾಗಿ ವೃತ್ತಿ ನಿರ್ವಹಿಸುತ್ತಿರುವ ಎಲ್ಲ ಅಲೋಪಥಿ ಹಾಗೂ ವಿವಿಧ ಆಯುಷ್ ಪದ್ಧತಿಗಳ ವೈದ್ಯರು ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳಲ್ಲಿ ನೆಗಡಿ ಹಾಗೂ ತೀವ್ರ ಜ್ವರ (ಐಎಲ್ಐ) ಲಕ್ಷಣಗಳಿರುವ ವ್ಯಕ್ತಿಗಳು ಕಂಡುಬಂದರೆ ಕೂಡಲೆ ಆ ಕುರಿತ ಮಾಹಿತಿಯನ್ನು ಕೆಪಿಎಂಇ ಪೋರ್ಟಲ್ ಮೂಲಕ ಜಿಲ್ಲಾಡಳಿತಕ್ಕೆ ಒದಗಿಸಬೇಕು. ಈ ಸೂಚನೆಯನ್ನು ಪಾಲಿಸದ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ,
ನಂತರ ಕೆಪಿಎಂಇ ನೋಂದಣಿಯನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯ ರೈಲು, ವಿಮಾನ ನಿಲ್ದಾಣಗಳಲ್ಲಿ ಹೊರ ರಾಜ್ಯಗಳಿಂದ ಆಗಮಿಸುವ ಜನರ ಮಾಹಿತಿ ಪ್ರತಿದಿನ ಕ್ರೋಡೀಕರಿಸಲಾಗುತ್ತಿದೆ. ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿ ಕೊಂಡಿರುವ ಜನರಲ್ಲಿ ಎಷ್ಟು ಜನ ಜಿಲ್ಲೆಗೆ ಆಗಮಿಸಿದ್ದಾರೆ ಎಂಬುದನ್ನು ಪರಿಶೀಲಿಸಬೇಕು. ಈ ಮಾಹಿತಿಯನ್ನು ಐಎಸ್ಟಿ ಮೊಬೈಲ್ ಆಪ್ನಲ್ಲಿ ಅಪ್ಡೇಟ್ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಗುರುತಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗಳಲ್ಲಿ ನಿತ್ಯ 3 ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ವೈದ್ಯರು, ನರ್ಸ್ ಹಾಗೂ ಗ್ರುಪ್ ಡಿ ಸಿಬ್ಬಂದಿಯ ಪಟ್ಟಿ ಮಾಡಿಟ್ಟುಕೊಳ್ಳಬೇಕು. ಮಹಾನಗರ ಪಾಲಿಕೆ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮಾಸ್ಕ್ ಧರಿಸದ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ವ್ಯಕ್ತಿಗಳಿಂದ ದಂಡ ಸಂಗ್ರಹಿಸುವ ಕಾರ್ಯ ಚುರುಕುಗೊಳಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ಕಿಮ್್ಸ ತಜ್ಞ ವೈದ್ಯ ಡಾ. ಲಕ್ಷ್ಮೀಕಾಂತ, ಸ್ಮಾರ್ಟ್ ಸಿಟಿ ಯೋಜನೆಯ ವಿಶೇಷಾಧಿಕಾರಿ ಎಸ್.ಎಚ್. ನರೇಗಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಡಾ. ಶಶಿ ಪಾಟೀಲ, ಡಾ. ಎಸ್.ಎಂ. ನಿಂಬಣ್ಣವರ, ಡಾ. ಎಸ್.ಎಂ. ಹೊನಕೇರಿ, ಡಾ. ತನುಜಾ, ಇತರರಿದ್ದರು.