

ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕೇಂದ್ರ ಮತ್ತು ಸಿಟಿ ಬಸ್ ನಿಲ್ದಾಣ ಕಾಮಗಾರಿ ಈ ವರ್ಷದ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ. ಕಳಪೆ ಕಾಮಗಾರಿ ಕುರಿತು ದೂರು ಬಂದಿದ್ದು, ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಕೇಂದ್ರ ಬಸ್ ನಿಲ್ದಾಣ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಕಲಾಮಂದಿರ ಸೇರಿದಂತೆ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 32.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣ ಕಾಮಗಾರಿ ಶೇ. 45 ಪೂರ್ಣಗೊಂಡಿದೆ ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿ ಕಳಪೆಯಾಗಿರುವ ಕುರಿತು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದೇನೆ. ಕಾಮಗಾರಿಗಳು ಕಳಪೆಯಾಗಿರುವುದು ಖಚಿತವಾದರೆ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಲಾಗುವುದು.
ಎಲ್ಲ ಕಾಮಗಾರಿಗಳನ್ನು ನಿಗದಿತ ಸಮದಲ್ಲಿಯೇ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸ್ಮಾರ್ಟ್ ಸಿಟಿ ಎಂಡಿ ಡಾ.ಪ್ರವೀಣ ಬಾಗೇವಾಡಿ ಮಾತನಾಡಿ, 46 ಕೋಟಿ ರೂ. ವೆಚ್ಚದಲ್ಲಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಿರ್ಮಿಸಲಾಗಿದೆ. ಬಸ್, ಅಂಬುಲೆನ್ಸ್ ಹಾಗೂ ತುರ್ತು ಸೇವೆಗೆ ವಾಹನಗಳ ಮೇಲೆ ನಿಗಾ ವಹಿಸಲಾಗುತ್ತದೆ. 67 ನಗರ ಸಾರಿಗೆ ಬಸ್‌ಗಳಿಗೆ ಜಿಪಿಎಸ್, ಹತ್ತು ಬಸ್ ಶೆಲ್ಟರ್‌ಗಳಲ್ಲಿ ಕ್ಯಾಮರಾ, ನಗರದ ಸ್ಮಾರ್ಟ್ ಬಸ್ ಶೆಲ್ಟರ್‌ಗಳಲ್ಲಿ ಮಾಹಿತಿ ಫಲಕ ಅಳವಡಿಸಲಾಗಿದೆ. ಕಸ ಹಾಕುವವರ ಮೇಲೆ ನಿಗಾ ವಹಿಸಲು 20 ಸ್ಥಳಗಳಲ್ಲಿ ಕ್ಯಾಮರಾ ಅಳವಡಿಸಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಸಂಸದೆ ಮಂಗಲ ಅಂಗಡಿ, ಶಾಸಕ ಅಭಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಇತರರಿದ್ದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಸಿಟಿ ಯೋಜನೆಗೆ 788 ಕೋಟಿ ರೂ. ಬಿಡುಗಡೆಯಾಗಿದೆ. ಅದರಲ್ಲಿ 635 ಕೋಟಿ ರೂ. ಖರ್ಚು ಮಾಡಲಾಗಿದೆ. 46 ಕಾಮಗಾರಿಗಳು ಪೂರ್ಣಗೊಂಡಿದ್ದು, 57 ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಒಂದು ಕಾಮಗಾರಿ ಮಾತ್ರ ಟೆಂಡರ್ ಹಂತದಲ್ಲಿದೆ. ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಸಮರ್ಪಕವಾಗಿ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.