

ಹಾಸನ: ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವಂತಹ ವಸತಿ ಶಾಲೆಯ ಅತಿಥಿ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.6ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಮೈದಾನದಲ್ಲಿ ಅನಿರ್ದಿಷ್ಟ ಅವಧಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಂ. ನಾಗೇಶ್ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವಂತಹ ಮೊರಾರ್ಜಿ ದೇಸಾಯಿ, ಕಿತ್ತೂರಾಣಿ ಚೆನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಅಟಲ್ ಬಿಹಾರಿ ವಾಜಪೇಯಿ, ಮಹಾತ್ಮ ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್ ಸೇರಿದಂತೆ ಇನ್ನಿತರ ವಸತಿ ಶಾಲೆಗಳಲ್ಲಿ ಸುಮಾರು 2100ನೂರಕ್ಕೂ ಹೆಚ್ಚು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಆದರೆ ಅವರಿಗೆ ಸರಿಯಾದ ರೀತಿ ವೇತನ ಹಾಗೂ ಸೌಲಭ್ಯಗಳನ್ನ ನೀಡದೇ ತಾರತಮ್ಯ ಮಾಡುತ್ತಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು
ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು ನಮ್ಮ ಬೇಡಿಕೆಗಳಾದ ರಾಜ್ಯದ ವಸತಿ ಶಾಲೆಗಳಲ್ಲಿ ಇರುವಂತಹ ಖಾಲಿ ಹುದ್ದೆಗಳನ್ನು ಹೊಸ ನೇಮಕಾತಿ ಮಾಡಬೇಕು. ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದು ಅವರ ಸೇವಾ ಆಧಾರದ ಮೇಲೆ ಕೃಪಾಂತವನ್ನು ನೀಡಬೇಕು. ಸರ್ಕಾರ ಈಗ ನೀಡುತ್ತಿರುವ ವೇತನ ಜೀವನ ನಿರ್ವಹಣೆಗೆ ಸಾಧ್ಯವಾಗುತ್ತಿಲ್ಲ ಆದ್ದರಿಂದ ಹೆಚ್ಚು ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಇರುವಂತಹ ವಸತಿ ಶಾಲೆಗಳ ಶಿಕ್ಷಕರು ಮತ್ತು ಉಪನ್ಯಾಸಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಮತ್ತು ಸರ್ಕಾರವು ಕೂಡ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಕ ಅರವಿಂದ್ ಹಾಜರಿದ್ದರು