

ಚಿತ್ರದುರ್ಗ: ರಾಯಚೂರು ಸೇರಿ ರಾಜ್ಯದ ವಿವಿಧ ನಗರಗಳ ಕೊಳೆಗೇರಿಗಳಲ್ಲಿ ವಾಸಿಸುವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಕೂಲಿ ಕಾರ್ಮಿಕರಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸೋಮವಾರ ಮನವಿ ರವಾನಿಸಿದರು.
ಸ್ಲಂ ಜನಾಂದೋಲನ ಕರ್ನಾಟಕ, ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾವೇದಿಕೆ ಸಂಘಟನೆಯಿಂದ ರಾಯಚೂರು ನಗರದ ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕಳೆದ 27 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಈ ಬೇಡಿಕೆಗೆ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸ್ಪಂದಿಸಿ, ಈಡೇರಿಸಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ನಿರಂತರ ಹೋರಾಟದ ಫಲವಾಗಿ 2017-18ರಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಿವೇಶನ ರಹಿತರಿಗೆ ಭೂಮಿ ಮಂಜೂರು ಮಾಡಿ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಆದರೆ, ಅಲ್ಲಿನ ಜಿಲ್ಲಾಡಳಿತ ಮತ್ತು ನಗರಸಭೆ ಅಧಿಕಾರಿಗಳು ಅಭಿವೃದ್ಧಿಪಡಿಸಿ ನಿವೇಶನ ಹಸ್ತಾಂತರ ಮಾಡದೆ ಅನ್ಯಾಯ ಮಾಡಿದ್ದು, ಕೂಡಲೇ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ಸಂಘಟನೆ ಅಧ್ಯಕ್ಷ ಎಂ.ಮಹೇಶ, ಪದಾಧಿಕಾರಿಗಳಾದ ಟಿ.ಮಂಜಣ್ಣ, ಭಾಗ್ಯಮ್ಮ, ಮಂಜುನಾಥ್, ತಿಪ್ಪೇಸ್ವಾಮಿ ಇತರರಿದ್ದರು.