

ದಾವಣಗೆರೆ: ಮಹಾನಗರ ಪಾಲಿಕೆಯ ವಾರ್ಡ್‌ಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕೇಳಿದ್ದು, ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಂಬರುವ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ನಗರದ 1ನೇ ವಾರ್ಡ್ ಗಾಂಧಿನಗರದ ಚೌಡೇಶ್ವರಿ ದೇವಸ್ಥಾನ ಆವರಣದಲ್ಲಿ ಬುಧವಾರ, ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ ಕಾರ್ಯಕ್ರಮ ಹಾಗೂ 1 ಲಕ್ಷ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ವಾರ್ಡ್‌ಗೆ 2-3 ಕೋಟಿ ರೂ. ಬಿಡುಗಡೆ ಮಾಡುವಂತೆ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್ ಅವರು ಮುಖ್ಯಮಂತ್ರಿಗಳಿಗೆ ಕೇಳಿರುವುದಾಗಿ ತಿಳಿಸಿದರು.
ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡವನ್ನು ಹೊಸದಾಗಿ ನಿರ್ಮಿಸಲು ಅನುದಾನ ಕೇಳಿದ್ದು ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಇತ್ತೀಚೆಗೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಭೇಟಿಯಾದಾಗ 125 ಕೋಟಿ ರೂ.ಗಳನ್ನು ಪಾಲಿಕೆಗೆ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.
‘ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಹೆಮ್ಮೆಯ ಕಾರ್ಯಕ್ರಮವಾಗಿದ್ದು ಇದು ರಾಜ್ಯದಲ್ಲೇ ಪ್ರಥಮವಾಗಿದೆ. ವಾರ್ಡ್ ಮಟ್ಟದಲ್ಲಿ ಕುಳಿತು ಅಧಿಕಾರಿಗಳು ಜನರಿಗೆ ಸೇವೆ ನೀಡುವುದರಿಂದ ಜನಸ್ನೇಹಿ ಆಡಳಿತಕ್ಕೆ ಸಾಕ್ಷಿಯಾಗಲಿದೆ ಎಂದರು.
ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಕರೊನಾ ಮತ್ತು ಮಳೆಯಿಂದಾಗಿ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್‌ಸಿಟಿಯ ಅಭಿವೃದ್ಧಿ ಕಾರ್ಯಗಳಿಗೆ ಸ್ವಲ್ಪ ಹಿನ್ನಡೆಯಾಗಿತ್ತು. ಇನ್ನುಮುಂದೆ ಚುರುಕುಗೊಳ್ಳಲಿವೆ ಎಂದು ತಿಳಿಸಿದರು.
ಮೈಸೂರಿನಂತೆ ದಾವಣಗೆರೆಯನ್ನೂ ಸ್ವಚ್ಛ ನಗರವನ್ನಾಗಿ ಮಾಡಬೇಕು. ಸಸಿಗಳನ್ನು ನೆಟ್ಟರಷ್ಟೇ ಸಾಲದು, ನೀರು ಹಾಕಿ ಬೆಳೆಸಬೇಕು. ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಪಕ್ಷಭೇದ ಮರೆತು ಕೈಜೋಡಿಸಬೇಕು ಎಂದು ಹೇಳಿದರು.
ಶಾಸಕ ಎಸ್.ಎ. ರವೀಂದ್ರನಾಥ್ ಮಾತನಾಡಿ, ಮನೆಯ ಬಾಗಿಲಿಗೆ ಸೇವೆಗಳನ್ನು ತಲುಪಿಸುವ ಈ ಕಾರ್ಯಕ್ರಮ ಕೇವಲ ಪ್ರಚಾರಕ್ಕಾಗಿ ನಡೆಯದೇ ನಿರಂತರವಾಗಿ ಮುಂದುವರಿಯಬೇಕು ಎಂದರು.
ಪಾಲಿಕೆಯ ಪ್ರತಿಪಕ್ಷ ನಾಯಕ ಎ. ನಾಗರಾಜ್ ಮಾತನಾಡಿ, ನಗರೋತ್ಥಾನ ಯೋಜನೆಯ ಅನುದಾನ ಹಂಚಿಕೆಯಲ್ಲಿ ನಡೆದಿರುವ ತಾರತಮ್ಯ ಸರಿಪಡಿಸುವಂತೆ ಸಚಿವರಿಗೆ ಮನವಿ ಮಾಡಿದರು.
ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯಾ, ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಟಿ. ವೀರೇಶ್, ಪ್ರಸನ್ನಕುಮಾರ್, ಗೌರಮ್ಮ, ಜಯಮ್ಮ, ಸದಸ್ಯ ಜೆ.ಡಿ. ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಹೆಚ್ಚುವರಿ ಎಸ್ಪಿ ರಾಜೀವ್ ಇದ್ದರು. ಆಯುಕ್ತ ವಿಶ್ವನಾಥ ಮುದಜ್ಜಿ ಸ್ವಾಗತಿಸಿದರು. ಉಪ ಆಯುಕ್ತೆ ರೇಷ್ಮಾ ಹಾನಗಲ್ ವಂದಿಸಿದರು.